ಜಿಲ್ಲೆ

ಡಿ.20ರಿಂದ ಮೂರು ದಿನ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಮಂಡ್ಯ: ಮಂಡ್ಯದಲ್ಲಿ ಡಿ.20, 21 ಮತ್ತು 22ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್‌ನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಹೇಳಿದರು.

ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ 1974ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ ಹಾಗೂ 63ನೇ ಸಾಹಿತ್ಯ ಸಮ್ಮೇಳನ 1994ರಲ್ಲಿ ಡಾ.ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಇತರರಿದ್ದರು.