ಮಡಿಕೇರಿ: ಗಾಂಧಿ ಸ್ಮಾರಕ ಭವನ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮಾರಕ ಭವನ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪರವರು ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಸಚಿವರು, ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನವನದಲ್ಲಿ ಪೂಜ್ಯ ಗಾಂಧೀಜಿಯವರ ಚಿತಾಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ೫೦ ಲಕ್ಷ ರೂ. ಬಿಡುಗಡೆ ಮಾಡಿದೆ ಎಂದರು.
ಗಾಂಧಿ ಸ್ಮಾರಕ ಭವನ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಯಾವುದೇ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಳ್ಳಬಾರದು ಎಂದು ಭೋಸರಾಜು ಮನವಿ ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಮಾತನಾಡಿ, ಗಾಂಧೀಜಿಯವರ ಚಿತಾಭಸ್ಮವಿರುವುದು ಗುಜರಾತ್ ರಾಜ್ಯದ ಸಬರಮತಿ ಹಾಗೂ ಮಡಿಕೇರಿಯಲ್ಲಿ ಎಂಬುದು ವಿಶೇಷವಾಗಿದೆ. ಆ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನವನವನ್ನು ಆಕರ್ಷಣೀಯವಾಗಿ ನಿರ್ಮಿಸಬೇಕು ಎಂದು ಸಲಹೆ ಮಾಡಿದರು.
ಮಾಜಿ ಸಚಿವರು ಹಾಗೂ ಸರ್ವೋದಯ ಸಮಿತಿ ಕಾರ್ಯಕಾರಿ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಮಡಿಕೇರಿಗೆ ಭೇಟಿ ನೀಡಿ ಗಾಂಧಿ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದು, ಈ ಸ್ಥಳಕ್ಕೆ ಗಾಂಧಿ ಮೈದಾನ ಎಂದು ಹೆಸರು ಬಂದಿದೆ. ಈ ನಿಟ್ಟಿನಲ್ಲಿ ಗಾಂಧೀಜಿ ಅವರ ಚಿತಾಭಸ್ಮವನ್ನಿಟ್ಟು ಶಾಶ್ವತವಾದ ಸ್ಮಾರಕ ಉದ್ಯಾನವನ ನಿರ್ಮಿಸುವಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆದಿದೆ. ಈ ಸ್ಮಾರಕ ಉದ್ಯಾನವನ ಕಾಮಗಾರಿಯನ್ನು ಆದಷ್ಟು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಜಿಲ್ಲಾಡಳಿತ ಸಹಕಾರದಲ್ಲಿ ಸರ್ವೋದಯ ಸಮಿತಿ ವತಿಯಿಂದ ಕಳೆದ ೬೫ ವರ್ಷಗಳಿಂದ ಸರ್ವಧರ್ಮ ಪ್ರಾರ್ಥನೆ ಮಾಡಿಕೊಂಡು ಬರಲಾಗಿದೆ. ಕಳೆದ ವರ್ಷ ೫೦ ಲಕ್ಷ ರೂ. ಬಿಡುಗಡೆಯಾಗಿದ್ದು, ಸ್ಮಾರಕ ಉದ್ಯಾನವನ ಕಾಮಗಾರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಕೋರಿದರು.
ಮಹಾತ್ಮ ಗಾಂಧೀಜಿರವರು ಹುತಾತ್ಮರಾದಾಗ ಅವರ ಅಂತಿಮ ದರ್ಶನಕ್ಕೆ ತೆರಳಿದ ಕೊಡಗು ಜಿಲ್ಲೆಯ ಸರ್ವೋದಯ ಸಮಿತಿಯ ಮುಖಂಡರು ಕೊಡಗಿಗೆ ತಂದಿದ್ದ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾಡಳಿತದ ವಶದಲ್ಲಿ ಜಿಲ್ಲಾ ಖಜಾನೆಯಲ್ಲಿ ಇರಿಸಲಾಗಿದೆ. ಚಿತಾಭಸ್ಮವನ್ನು ಗಾಂಧೀಜಿ ಸ್ಮಾರಕದಲ್ಲಿ ಇರಿಸಿ ರಾಜ್‌ಘಾಟ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಬೇಕಿದೆ ಎಂದ ಅವರು, ಪ್ರತಿ ವರ್ಷ ಜ.೩೦ ರಂದು ಜಿಲ್ಲಾ ಖಜಾನೆಯಿಂದ ಚಿತಾಭಸ್ಮವನ್ನು ಹೊರತೆಗೆದು ಪೊಲೀಸ್ ಗೌರವದೊಂದಿಗೆ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಹೊರಟು ಮತ್ತೆ ಜಿಲ್ಲಾ ಖಜಾನೆಯಲ್ಲಿ ಚಿತಾಭಸ್ಮವನ್ನು ಇರಿಸಿಕೊಂಡು ಬರಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅನಿತಾ ಪೂವಯ್ಯ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಇತರರು ಇದ್ದರು.