ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರದಲ್ಲಿ ಇತ್ತೀಚಿಗೆ ಗಣೇಶ ಮೆರವಣಿಗೆ ವೇಳೆ ಪಟಾಕಿ ದುರಂತದಲ್ಲಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಹೆಚ್ಚು ಅಲರ್ಟ್ ಆಗಿರುವ ಜಿಲ್ಲಾಡಳಿತ ಪಟಾಕಿ ದುರಂತ ತಡೆಗೆ ಕಟ್ಟುನಿಟ್ಟಿನ ನಿಯಮರೂಪಿಸಿರುವ ಬೆನ್ನಲ್ಲೆ ಜಿಲ್ಲಾ ಆರೋಗ್ಯ ಇಲಾಖೆ ತುರ್ತು ಚಿಕಿತ್ಸೆಗೆ ಸಕಲ ಸಿದ್ದತೆ ಮಾಡಿಕೊಂಡಿದೆ.
ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು, ಗ್ರಾಮೀಣ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಬ್ಬದ ದಿನ 24 ಗಂಟೆ ವೈದ್ಯರು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುವಂತೆ ಆದೇಶ ಹೊರಡಿಸಿದೆ. ಪಟಾಕಿ ಸಿಡಿಸುವ ವೇಳೆ ಸಾಮಾನ್ಯವಾಗಿ ಸಂಭವಿಸಬಹುದಾದ ಪ್ರಕರಣಗಳಿಗೆ ತಕ್ಷಣ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಲಟ್ ಆಗಿದೆ, ಮುಖ್ಯವಾಗಿ ಕಣ್ಣಿಗೆ ಹಾನಿ ಮಾಡಿಕೊಳ್ಳು ಪ್ರಮಾಣ ಹೆಚ್ಚಿರುವುದರಿಂದ ಕಣ್ಣಿನ ತಜ್ಞರು ದಿನದ 24 ಗಂಟೆ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯನಿರತರಾಗಿರಬೇಕು ಚಿಕಿತ್ಸೆಗೆ ಸಂಬಂಧಪಟ್ಟ ಎಲ್ಲ ಪರಿಕರಗಳು ಸಿದ್ದವಿರಬೇಕು ಎಂದು ಸೂಚನೆ ನೀಡಲಾಗಿದೆ. ಅದೇ ರೀತಿ ಸುಟ್ಟುಗಾಯಗಳ ಅವಘಡಗಳನ್ನು ನಿಭಾಯಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಉಪನಿರ್ದೇಶಕ ಡಾ.ಲಕ್ಕಕೃಷ್ಣಾರೆಡ್ಡಿ ಮಾಹಿತಿ ನೀಡಿದ್ದಾರೆ.