ಮಂಗಳೂರು ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿದರು. ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. 
ಜಿಲ್ಲೆ

ಮಾರ್ಚ್ 31, ಏಪ್ರಿಲ್ 14 ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ; ಪಿಯುಸಿ ಮಕ್ಕಳಿಗೆ 10 ಕೋಟಿ ರೂ. ಅಧಿಕ ಕೊಡುಗೆ

Mangaluru - Prakash MC Manjeshwar

ಮಂಗಳೂರು: ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ (ಪದವಿ ಪೂರ್ವ) ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ.

  • 10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು ನಗರದಲ್ಲಿ ಶುಕ್ರವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • ಆಯ್ಕೆ ಮಾನದಂಡ
    ವಿದ್ಯಾರ್ಥಿಗಳ ಎಸೆಸ್ಸೆಲ್ಸಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ಅವರು ಹೇಳಿದರು.
  • ಯಾರ‌್ಯಾರಿಗೆ ಯಾವಾಗ ಪರೀಕ್ಷೆ?
    ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ನಿಮಿಷಗಳ ಪರೀಕ್ಷೆಯು ಮಾರ್ಚ್ 31ರಂದು ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಹಾಗೂ ಏಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ .
    ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಏಪ್ರಿಲ್ 10 ವರೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ವೆಬ್ ಸೈಟ್ https://scholarship.Alvas.org/PUC/login.php ಮೂಲಕ ಅರ್ಜಿ ಸಲ್ಲಿಸಬಹುದು.
  • ವಿಶೇಷ ಸೂಚನೆ:
    ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ.
    ಶೈಕ್ಷಣಿಕ- ಬೋಧನಾ ಭಿನ್ನತೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಜಗಜಾಂತರ, ಪ್ರಾದೇಶಿಕ ಭೇದಭಾವ, ಲಿಂಗ ತಾರತಮ್ಯ ಎಲ್ಲವನ್ನೂ ಮೀರಿ ಅರ್ಹ ಮಕ್ಕಳಿಗೆ ಅರ್ಹತೆಯ ಆಧಾರದಲ್ಲಿ ಅತ್ಯುನ್ನತ ಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರ ಸದಾಶಯದಂತೆ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶ ಪರೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ.
    ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 8884477588/ 6366377827 ಅಥವಾ 6366377823 ಸಂಪರ್ಕಿಸಬಹುದು.
    ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.