ಜಿಲ್ಲೆ

ಅ.14 ಮತ್ತು 15ರಂದು ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಅ. 14 ಮತ್ತು 15 ರಂದು ಮೂಡುಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.
ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು 200ಕ್ಕೂ ಅಧಿಕ ಕಂಪೆನಿಗಳು ನೋಂದಾಯಿಸಿದ್ದು, 12,518ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಇವೆ. ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್,ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ , ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ .
ಐಟಿಐ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಇನ್ನೂ ಕಡಿಮೆ ವಿದ್ಯಾಭ್ಯಾಸದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಭ್ಯರ್ಥಿಗಳಿಗೆ ಉಚಿತ ಆನ್‌ಲೈನ್ ನೋಂದಣಿ ಕಡ್ಡಾಯ. ನೋಂದಾಯಿತ ಅಭ್ಯರ್ಥಿಗಳಿಗೆ ಆಳ್ವಾಸ್ ಪ್ರಗತಿಯ ಉದ್ಯೋಗ ತಯಾರಿ ಮಾಹಿತಿ ಒದಗಿಸಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಅ. 13ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ನರ್ಸಿಂಗ್ ಹಾಗೂ ಐಟಿಐ ಅಭ್ಯರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು. ಅಭ್ಯರ್ಥಿಗಳಿಗೆ ಉದ್ಯೋಗ ಮೇಳದ 2 ದಿನವೂ ನೋಂದಣಿಗೆ ಅವಕಾಶವಿದೆ ಎಂದು ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.