ವಿರಾಜಪೇಟೆ: ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್‌ಎಸ್‌ಎಸ್, ಐಕ್ಯೂಎಸಿ ವಿದ್ಯಾರ್ಥಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಭಾನುವಾರ ಆಚರಿಸಲಾಯಿತು.
ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಅಂಬೇಡ್ಕರ್ ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ರಚಿಸಿದ ಸಂವಿಧಾನದಿಂದ ಎಲ್ಲರೂ ಸಮಾನವಾಗಿ ಬದುಕುವಂತಾಗಿದೆ ಎಂದರು.
ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ, ಅಂಬೇಡ್ಕರ್ ಅವರ ತತ್ವ, ಚಿಂತನೆಗಳು ಸಾರ್ವಕಾಲಿಕವಾಗಿದ್ದು, ಅವರು ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು. ಸಂವಿಧಾನ, ಆರ್‌ಬಿಐ ಸ್ಥಾಪನೆ, ಅರ್ಥಶಾಸ್ತ್ರಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದರು.
ಐಕ್ಯೂಎಸಿ ಸಂಚಾಲಕಿ ಹೇಮಾ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಎನ್‌ಎಸ್‌ಎಸ್ ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್, ವಿದ್ಯಾರ್ಥಿ ಘಟಕದ ಸಂಚಾಲಕಿ ದೃಶ್ಯಾ ಇದ್ದರು. ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.