ಮುಳಬಾಗಿಲು: ತಾಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ಅವಶ್ಯಕತೆ ಇರುವ ಎಲ್ಲ ಸೌಲಭ್ಯಗಳನ್ನು ಒದಗಿಸುವ ಮೂಲಕ ರೋಗಿಗಳಿಗೆ ಅಗತ್ಯ ವೈದ್ಯಕಿಯ ಸೇವೆಗಳು ನೀಡಲು ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಸಮೃದ್ಧಿ ವಿ.ಮಂಜುನಾಥ್ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಬಿಡುಗಡೆಯಾಗಿದ್ದ ಉಚಿತ ಆರೋಗ್ಯ ಸೇವೆಗಳ ಆಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ ಇರುವ ಆಯ್ದ 6 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೊಸ ಅಂಬುಲೆನ್ಸ್ ವಾಹನಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು. ಅಲ್ಲದೆ ಮುಳಬಾಗಿಲು ಸಾರ್ವಜನಿಕ ಆಸ್ಪತ್ರೆಯ ಶವಗಾರದಿಂದ ಶವವನ್ನು ಸಾಗಿಸಲು ವಾಹನವನ್ನು ವೈಯಕ್ತಿಕವಾಗಿ ನೀಡಲಿದ್ದು, ಉಚಿತವಾಗಿ ಶವವನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ತಾಲೂಕಿನ ನಂಗಲಿ ಮತ್ತು ಮುಳಬಾಗಿಲಿನ ಸಾರ್ವಜನಿಕ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಿ ಹೈಟೆಕ್ ಸ್ಪರ್ಶ ನೀಡುವ ಮೂಲಕ ಆರೋಗ್ಯ ಸೇವೆಗಳನ್ನು ಹೆಚ್ಚಿಸಲಾಗುವುದು. ನಗರ ಹೊರವಲಯದ ನರಸಿಂಹ ತೀರ್ಥ ಬಳಿ 26 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸಲು ಈಗಾಗಲೇ ಭೂಮಿಪೂಜೆ ನೆರವೇರಿಸಿ, ಕಾಮಗಾರಿ ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲಿ ಕಟ್ಟಡ ಪೂರ್ಣಗೊಳ್ಳಲಿದೆ. ತಾಯಲೂರು ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಗತಿಯಲ್ಲಿದೆ ಎಂದು ಶಾಸಕರು ಹೇಳಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಗುಣ, ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಸುರೇಂದ್ರ, ಸರ್ಜನ್ ಡಾ.ಭಾರತಿ, ದಂತ ವಿಭಾಗದ ಸರ್ಜನ್ ಡಾ.ಜಿ.ಎಸ್.ವೇಣುಗೋಪಾಲ್, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.