ಜಿಲ್ಲೆ

ಡಿ.30ರಂದು ಜಿಲ್ಲೆಗೆ ಅಮಿತ್ ಷಾ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾಹಿತಿ

reportermys

ಮಂಡ್ಯ: ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಡಿ.30ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂತೆಯೇ ಅಂದು ಮಧ್ಯಾಹ್ನ ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಿರುವ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ನಗರದ ಮಂಡ್ಯ ವಿವಿ ಆವರಣದಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1 ಲಕ್ಷ ಜನರು ಭಾಗಿಯಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷವನ್ನು ಸದೃಢಗೊಳಿಸಲು ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್, ಡಾ.ಅಶ್ವಥ್ ನಾರಾಯಣ್, ಆರ್.ಅಶೋಕ್, ಕೆ.ಸಿ.ನಾರಾಯಣಗೌಡ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಸಮಾವೇಶದ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ವಹಿಸಲಿದ್ದಾರೆ. ಜಿಲ್ಲೆಯ ರೈತ ಪ್ರತಿಭಟನೆ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಮಾತ್ರವಲ್ಲದೆ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ರಾಜ್ಯಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಮುಖಂಡರಾದ ಮೈ.ವಿ.ರವಿಶಂಕರ್, ಎಸ್.ಸಚ್ಚಿದಾನಂದ, ಅಶೋಕ್ ಜಯರಾಂ, ಎಚ್.ಆರ್.ಅರವಿಂದ್, ಸಿ.ಟಿ.ಮಂಜುನಾಥ್ ಹಾಜರಿದ್ದರು.