ಜಿಲ್ಲೆ

ಸಕಾರಣವಿಲ್ಲದೇ ಅರ್ಜಿ ತಿರಸ್ಕರಿಸುವಂತಿಲ್ಲ

ಮರಿದೇವ ಹೂಗಾರ

ಹುಬ್ಬಳ್ಳಿ: ಬಡವರು ಹಾಗೂ ವಿವಿಧ ವೃತ್ತಿಯಲ್ಲಿರುವವರಿಗೆ ಸ್ವಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಕೌಶಲ ತರಬೇತಿ ಪಡೆದ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸದಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಜಿಲ್ಲೆಯ ವಿವಿಧ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಫಲಾನುಭವಿಗಳು ವಿವಿಧ ಚಟುವಟಿಕೆ ನಡೆಸಲು ಬ್ಯಾಂಕ್‌ಗಳು ಆರ್ಥಿಕ ನೆರವು ನೀಡಲು ಶಿಫಾರಸ್ಸು ಆದ ಎಲ್ಲ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಫಲಾನುಭವಿಗಳು ಸಾಲಕ್ಕಾಗಿ ಅರ್ಜಿ ಸಲ್ಲಿಸಿದಾಗ ಬ್ಯಾಂಕ್ ಅಧಿಕಾರಿಗಳು ಅವರೊಂದಿಗೆ ಕಟುವಾಗಿ ವರ್ತಿಸಬಾರದು. ಸಾಲಕ್ಕಾಗಿ ಅವರನ್ನು ಸತಾಯಿಸಬಾರದು. ವಿನಾ ಕಾರಣ ಅರ್ಜಿ ತಿರಸ್ಕರಿಸಬಾರದು. ಎಲ್ಲಕ್ಕಿಂತ ಹೆಚ್ಚಾಗಿ ಅವರಿಗೆ ಕನ್ನಡದಲ್ಲೇ ಮಾಹಿತಿ ನೀಡುವ ವ್ಯವಸ್ಥೆ ಮಾಡಬೇಕು. ಸಂಬಂಧಿತ ಅಧಿಕಾರಿಗೆ ಕನ್ನಡ ಬಾರದಿದ್ದರೆ, ಕನ್ನಡ ಬಲ್ಲ ಸಿಬ್ಬಂದಿಯ ನೆರವು ಪಡೆಯಬೇಕು ಎಂದು ತಿಳಿಸಿದರು.

ಜಿಲ್ಲೆಯ ಕೆಲವು ಬ್ಯಾಂಕ್‌ಗಳು ಪಿಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವ ವೇಳೆ ದುಬಾರಿ ಸ್ಟಾಂಪ್ ಶುಲ್ಕ ಪಡೆಯುತ್ತಿದ್ದಾರೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ, ಯೋಜನೆಗೆ ನಿಗದಿತ ಮೌಲ್ಯಕ್ಕಿಂತ ಕೆಲ ಬ್ಯಾಂಕ್‌ಗಳು ಹೆಚ್ಚಿಗೆ ಪಡೆಯುತ್ತಿರುವ ಬಗ್ಗೆ ಅನೇಕರು ಲಿಖಿತವಾಗಿ ದೂರು ನೀಡಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ದಿವ್ಯಪ್ರಭು, ಉಪ ಮೇಯರ್ ಸಂತೋಷ ಚವ್ಹಾಣ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೇಲ್ಸೇತುವೆ ಕಾಮಗಾರಿ ವೇಗಕ್ಕೆ ಸೂಚನೆ: ಹುಬ್ಬಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಯ ವೇಗ ಹೆಚ್ಚಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದರು.

ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದೆ. ಪ್ರಾಥಮಿಕ ಹಂತವಾಗಿ ಪಿಲ್ಲರ್ ಅಳವಡಿಸುವ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆಯಾಗುತ್ತಿದೆ. ವಾಹನ ಸವಾರರು ಹೈರಾಣಾಗಿದ್ದಾರೆ. ಪ್ಲೈ ಓವರ್ ಕಮಿಟಿ ನೀಡಿರುವ ಮಾರ್ಗಸೂಚಿಯಂತೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.