ಆನೇಕಲ್: ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸಿಕೊಡುವ ನಿಟ್ಟಿನಲ್ಲಿ ಧನಸಹಾಯ ನೀಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಪಟ್ಟಣದ ದೇವರಕೊಂಡಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ತಾಲೂಕಿನ ಕಟ್ಟಡ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಿಐಟಿಯು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಬಿ.ಎನ್.ಮಂಜುನಾಥ್ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲೂ ಕಟ್ಟಡ ಕಾರ್ಮಿಕರಿಗೆ ನ್ಯಾಯ ಒದಗಿಸಲಿಲ್ಲ. ಕಾಂಗ್ರೆಸ್ ಸರ್ಕಾರವೂ ಕಟ್ಟಡ ಕಾರ್ಮಿಕರಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷೆ ಕೆ.ಎಸ್.ಲಕ್ಷ್ಮೀ ಮಾತನಾಡಿ, ನಮ್ಮನ್ನು ಆಳುವ ಸರ್ಕಾರಗಳು ಬಡವರಿಗೆ ನ್ಯಾಯ ಒದಗಿಸುತ್ತಿಲ್ಲ. ರಾಜ್ಯ ಸರ್ಕಾರ, ಬಡ ಮಕ್ಕಳಿಗೆ ಲ್ಯಾಪ್‌ಟಾಪ್ ನೀಡುತ್ತೇವೆ ಎಂದು ಹೇಳುತ್ತಿದೆ. ಆದರೆ, ಇದರ ಬದಲು ಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಹಣ ವರ್ಗಾವಣೆ ಮಾಡುವುದರಿಂದ ಹೆಚ್ಚಿನ ಮಕ್ಕಳಿಗೆ ಸೌಲಭ್ಯ ದೊರಕಲಿದೆ. ಇದರಲ್ಲಿ ಯಾವುದೇ ಭ್ರಷ್ಟಾಚಾರ ಆಗುವುದಿಲ್ಲ ಎಂದು ಹೇಳಿದರು.
ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಪಿ.ಸುರೇಶ್ ಕಾರ್ಯಾಧ್ಯಕ್ಷ ಹನುಮಯ್ಯ, ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್, ಖಜಾಂಚಿ ವೇಣುಗೋಪಾಲ್, ತಾಲೂಕು ಪದಾಧಿಕಾರಿಗಳಾದ ಲಕ್ಷ್ಮಣ್, ಶಾಮಣ್ಣ, ಫಯಾಜ್, ನಟರಾಜು, ಬಾಬು, ಗೋಪಾಲ್, ಭದ್ರಪ್ಪ, ನಾಗರಾಜು ಮತ್ತಿತರರು ಇದ್ದರು.