ಜಿಲ್ಲೆ

ಅಂಕೋಲಾ‌ ವಿಮಾನ ನಿಲ್ದಾಣ ಸಂಬಂಧ ಬೆಂಗಳೂರಿನಲ್ಲಿ ಮಹತ್ವದ ಸಭೆ

Uttara Kannada - Subash Hegde

ಕಾರವಾರ: ಅಂಕೋಲಾ‌ ವಿಮಾನ ನಿಲ್ದಾಣ ನಿರ್ಮಾಣದ ಭೂಸ್ವಾಧೀನ ಪ್ರಕ್ರಿಯೆ ಹಾಗೂ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು.

ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ, ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್‌ ಸೈಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಅಂಕೋಲಾ ಅಲಗೇರಿಯಲ್ಲಿ ಸೀಬರ್ಡ್ ನೌಕಾ ಯೋಜನೆಯ ಎರಡನೇ ಹಂತದ ಭಾಗವಾಗಿ ವಿಮಾನ ನಿಲ್ದಾಣ‌ ನಿರ್ಮಾಣವಾಗುತ್ತಿದೆ.

ಅದರ ಜತೆ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ರಕ್ಷಣಾ ಇಲಾಖೆ ಮುಂದಾಗಿದೆ. ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೇಕಾದ ಹೆಚ್ಚುವರಿ 1 ಎಕರೆ ರನ್ ವೇ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ. ಬಾವಿಕೇರಿ, ಬೇಲೆಕೇರಿ ಹಾಗೂ ಅಲಗೇರಿ ಗ್ರಾಮಗಳ ಒಟ್ಟು 93 ಎಕರೆ ಭೂಮಿ ಸ್ವಾಧೀನಕ್ಕೆ ಅಂತಿಮ‌ ಅಧಿಸೂಚನೆ‌ ಹೊರಡಿಸಲಾಗಿದೆ.

ಆದರೆ, ಭೂ ಮಾಲೀಕರು ತಮಗೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಸಿಎಂ‌ ನೇತ್ರತ್ವದಲ್ಲಿ ಸಭೆ ನಡೆಸಲಾಯಿತು.