ಉಡುಪಿ: ದಕ್ಷಿಣ ಭಾರತದಲ್ಲೇ ಕರ್ನಾಟಕ ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿರುವ ರಾಜ್ಯವಾಗಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆ ಅತ್ಯಂತ ಪ್ರಮುಖವಾಗಿದೆ. ಒಂದು ವೇಳೆ ಕಾಂಗ್ರೆಸ್ ಗೆದ್ದರೆ 2024ರ ಲೋಕಸಭಾ ಚುನಾವಣೆಗೆ ರಾಜ್ಯ ಎಟಿಎಂ ರೀತಿ ಬಳಕೆಯಾಗಲಿದೆ. ಸುಮಾರು 28,000 ಕೋಟಿ ರೂ. ಕಾಂಗ್ರೆಸ್ ಪಾಲಾಗುವ ಸಾಧ್ಯತೆ ಇದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದರು.
ಸೋಮವಾರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಕೂಟ ಕರ್ನಾಟಕದಲ್ಲಿ ಮಾಡಿದಂತೆಯೇ ಪ್ರತೀ ತಿಂಗಳು ಮಹಿಳೆಯರಿಗೆ 1,000 ರೂ. ನೀಡುವುದಾಗಿ ಭರವಸೆ ನೀಡಿತ್ತು. ಸರ್ಕಾರ ಅಧಿಕಾರಕ್ಕೆ ಬಂದು 22 ತಿಂಗಳು ಕಳೆದರೂ ಆಶ್ವಾಸನೆ ಈಡೇರಿಸಲು ಸಾಧ್ಯವಾಗಿಲ್ಲ. ಉಚಿತ ಕೊಡುಗೆಗಳಿಗೆ ಹಣ ಹೊಂದಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂಬುದನ್ನು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ 5 ವಿಧಾನಸಭಾಕ್ಷೇತ್ರದಾದ್ಯಂತ ಸಂಚರಿಸಲಿರುವ 5 ಪ್ರಗತಿ ರಥಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಚಾಲನೆ ನೀಡಿದರು. ಶಾಸಕರಾದ ರಘುಪತಿ ಭಟ್, ಶ್ರೀನಿವಾಸ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಮೊದಲಾದವರು ಉಪಸ್ಥಿತರಿದ್ದರು.