ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 62 ತಾಲೂಕುಗಳನ್ನು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಒಂದು ಚುನಾವಣೆ ಅಸಾಧ್ಯ: ದೇಶದಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆಯ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವನೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ ? ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದರು.
ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.