ಮಂಡ್ಯ : ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಮೂವರು ಗಾಯಾಳುಗಳ ಪೈಕಿ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ತಾಲೂಕಿನ ಐನೋರಹುಂಡಿ ಗ್ರಾಮದ ಜವರಯ್ಯ(60), ತಿಗಡಹಳ್ಳಿ ಗ್ರಾಮದ ಪರಶಿವಯ್ಯ(60) ಮೃತರು. ಮತ್ತೊಬ್ಬ ಗಾಯಾಳು ಸ್ವಾಮಿ ಅವರಿಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಈ ಮೂವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಳವಳ್ಳಿಯಿಂದ ಕೊಳ್ಳೇಗಾಲ ಕಡೆಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿತ್ತು. ಬಸ್ಸಿನ ಕೆಳಗೆ ದ್ವಿಚಕ್ರ ವಾಹನ ಸಮೇತ ಸವಾರರು ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಗಾಯಾಳುಗಳನ್ನು ಸ್ಥಳೀಯರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.