ಮಂಗಳೂರು : ರಾಜ್ಯ ಸರ್ಕಾರದ 2024-25 ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದೆಂದು ಘೋಷಿಸಲಾಗಿತ್ತು.
ಈ ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಹಾಗೂ 2024ರ ಮಾರ್ಚ್ ತಿಂಗಳಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿತ್ತು. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ
ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಈಗ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ
ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿ ವಿಳಂಬವನ್ನು ತಡೆಗಟ್ಟುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ.
ಮಂಗಳೂರು ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ಮಂಗಳೂರು ತಾಲೂಕು, ಮೂಲ್ಕಿ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ವಿಟ್ಲ, ಸುಳ್ಯ, ಮೂಡುಬಿದಿರೆ ಉಪನೋಂದಣಿ ಕಚೇರಿಗಳ ಪೈಕಿ ಯಾವುದೇ ಉಪನೋಂದಣಿ ಕಚೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದು.
ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.