ಹುಬ್ಬಳ್ಳಿ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದು, ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜಣ್ಣ ಕೊರವಿ ಆಗ್ರಹಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳವು ಪವಿತ್ರ ಧಾರ್ಮಿಕ ಕೇಂದ್ರವಾಗಿದೆ. ಧರ್ಮಾಧಿಕಾರಿಗಳು ಬಹಳಷ್ಟು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅವರ ಯೋಜನಾ ಕೌಶಲ ಅದ್ಬುತವಾಗಿದೆ.
ಲಕ್ಷಾಂತರ ಜನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ. ಇಂತಹ ಪೂಜ್ಯರ ಬಗ್ಗೆ ಕೆಲವು ಸಮಾಜ ದ್ರೋಹಿಗಳು ಮಾನಹಾನಿಕರ ಕೆಲಸ ಮಾಡುತ್ತಿರುವುದು ನೋವಿನ ಸಂಗತಿ ಎಂದರು.
ಪೂಜ್ಯ ವೀರೇಂದ್ರ ಹೆಗ್ಗಡೆ ಅವರದು ತಾಯಿ ಹೃದಯ. ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಧನೆಯ ಶಿಖರದಲ್ಲಿದ್ದಾರೆ. ಅವರ ವಿರುದ್ಧ ಮಾತನಾಡುವವರು ಏನು ಸಮಾಜಮುಖಿ ಕೆಲಸ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಸರ್ಕಾರ ಇಂತಹ ಅಪಪ್ರಚಾರಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ವೇದಿಕೆಯ ಜಿಲ್ಲಾಧ್ಯಕ್ಷ ಸಂತೋಷ ಆರ್ ಶೆಟ್ಟಿ, ಮಾಜಿ ಅಧ್ಯಕ್ಷ ಪೀರಾಜಿ ಖಂಡೇಕರ, ವಸಂತ ಅರ್ಕಾಚಾರ, ಸವಿತಾ ಅಮರಶೆಟ್ಟಿ, ದೇವೇಂದ್ರಪ್ಪ ಕಾಗೇನವರ ಇದ್ದರು.