ಜಿಲ್ಲೆ

ಎಪಿಎಂಸಿ ಕಾಯ್ದೆ ವಾಪಸ್ ವಿರುದ್ಧ ಬಿಜೆಪಿ ಹೋರಾಟ

ಹುಬ್ಬಳ್ಳಿ: ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್, ವಿದ್ಯುತ್ ದರ ಏರಿಕೆ, ರೈತ ವಿದ್ಯಾನಿಧಿ ಯೋಜನೆ ರದ್ದು ಸೇರಿ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಹಲವು ರೈತ ವಿರೋಧಿ ನೀತಿಗಳನ್ನು ಖಂಡಿಸಿ ರಾಜ್ಯದಲ್ಲಿ ಜನಜಾಗೃತಿ ಹಾಗೂ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ ಎಂದು ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾಟಿರ್ ರೈತ ಮೋರ್ಚಾ ಧಾರವಾಡ ಗ್ರಾಮಾಂತರ ಜಿಲ್ಲಾ ವತಿಯಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದರು.

ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ವ್ಯವಸ್ಥೆ ತರಲಾಗಿತ್ತು. ಸಾಗಾಣಿಕೆ ವೆಚ್ಚ, ಕಮಿಷನ್ ಇಲ್ಲದ ವ್ಯವಸ್ಥೆ ಅನುಕೂಲವಾಗುತ್ತಿತ್ತು. ಇಂತಹ ಕಾಯ್ದೆ ವಾಪಸ್ಗೆ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿರುವುದು ಸರಿಯಲ್ಲ. ಇದರ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಇದೇ ರೀತಿ ರೈತರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಸಿದ್ದರಾಮಯ್ಯನವರು ರದ್ದು ಪಡಿಸುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದಾರೆ. ಕಿಸಾನ್ ಸಮ್ಮಾನ ಕೇಂದ್ರ ಸರ್ಕಾರದ ಅತ್ಯುತ್ತಮ ಯೋಜನೆಯಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ. ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು ಮಾಡಲು ಸರ್ಕಾರ ಮುಂದಾಗಿದೆ. ನೀರಾವರಿ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದರು.

ಈ ಎಲ್ಲ ಹಿನ್ನೆಲೆಯಲ್ಲಿ ಜುಲೈ ಅಂತ್ಯದ ವರೆಗೆ ಸರ್ಕಾರಕ್ಕೆ ಗಡುವು ನೀಡಲಾಗುವುದು. ಅಷ್ಟರಲ್ಲಿ ರೈತಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮೊದಲ ಹಂತದಲ್ಲಿ ಜನಜಾಗೃತಿ, ನಂತರದಲ್ಲಿ ಸಂಬಂಧಪಟ್ಟ ಇಲಾಖೆ ಸಚಿವರಿಗೆ ಮನವಿ ಮಾಡಲಾಗುವುದು. ಕೃಷಿ ಸಚಿವರನ್ನು ಭೇಟಿ ಮಾಡಿ ಚಚಿರ್ಸಲಾಗುವುದು.

ಅನಿವಾರ್ಯವಾದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಾವೇಂದ್ರಗೌಡ ಪಾಟೀಲ, ಬಿಜೆಪಿ ಧಾರವಾಡ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಸವರಾಜ ಕುಂದಗೋಳಮಠ, ಶಶಿಮೌಳಿ ಕುಲಕರ್ಣಿ, ರುದ್ರಯ್ಯ ಚಿಕ್ಕಮಠ ಇತರರು ಎಚ್ಚರಿಕೆ ನೀಡಿದರು.