ಮಂಡ್ಯ: ನಗರದ ಕುರುಬರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ಮಾಡಿ ಸಂತ ಕನಕದಾಸರವರ ಭಾವಚಿತ್ರವನ್ನು ವಿರೂಪಗೊಳಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತಾಯಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಮಾತನಾಡಿ, ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ ಸಾರ್ವಜನಿಕ ದೇಣಿಗೆಯ ಮೂಲಕ ವಿದ್ಯಾರ್ಥಿ ನಿಲಯ ಸ್ಥಾಪನೆ ಮಾಡಲಾಗಿದೆ. ಪಾದಯಾತ್ರೆ ವೇಳೆ ವಿದ್ಯಾರ್ಥಿನಿಲಯದ ಕಟ್ಟಡದ ಕಿಟಕಿ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಧ್ವಂಸಗೊಳಿಸಿರುತ್ತಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವುಳ್ಳ ಬ್ಯಾನರ್ ಹರಿದು ಕ್ರೌರ್ಯವನ್ನು ಮೆರೆದು ಅಪಮಾನ ಮಾಡಿರುತ್ತಾರೆ ಎಂದು ತಿಳಿಸಿದರು.
ಈ ಕೃತ್ಯದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮವನ್ನು ಜರುಗಿಸಬೇಕು. ಪ್ರಚೋದನೆಯನ್ನು ನೀಡಿದವರನ್ನು ಪತ್ತೆಹಚ್ಚಿ ಅಂತವರನ್ನು ಗಡಿಪಾರು ಮಾಡಬೇಕು. ರಾಜ್ಯದಲ್ಲಿರುವ ಎಲ್ಲ ಶೋಷಿತ ಸಮುದಾಯಗಳ ಸಂಘ ಸಂಸ್ಥೆ, ವಿದ್ಯಾರ್ಥಿ ನಿಲಯಗಳ ರಕ್ಷಣೆಗೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ನೀಡಬೇಕು. ಶೋಷಿತ ಸಮುದಾಯಗಳು ಸೇರಿ ಸಮಾವೇಶ ಮಾಡಿರುವುದನ್ನು ತಡೆಯಲಾಗದೇ ಇಂತಹ ಕೃತ್ಯ ಮಾಡಿರಬಹುದು. ಇಂತಹ ಘಟನೆಗಳು ರಾಜ್ಯದಲ್ಲಿ ಎಲ್ಲಿಯೂ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್, ಅನಂತ ನಾಯಕ್, ಮನನ್ ಸೇಠ್, ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಎಚ್.ನಾಗರಾಜ್, ಎಂ.ಎಸ್.ರಾಜಣ್ಣ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಸಾತನೂರು ಕೃಷ್ಣ, ರಾಜ್ಯ ಕುರುಬರ ಸಂಘದ ಖಜಾಂಚಿ ಕೃಷ್ಣಮೂರ್ತಿ ಇತರರಿದ್ದರು.