ಅರಕಲಗೂಡು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಶಾಸಕ ಎ. ಮಂಜು ಲೋಕೋಪಯೋಗಿ ಮತ್ತು ಕೆಆರ್ ಐಡಿಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು. ಹಾಸನ- ಪಿರಿಯಾಪಟ್ಟಣ ರಸ್ತೆಗೆ ತುರ್ತಾಗಿ ಇನ್ನೊಂದು ಕೋಟ್ ಟಾರ್ ಹಾಕುವಂತೆ ಹಾಗೂ ರಾಮನಾಥಪುರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವಾಗಿ ಪೂರ್ಣ ಗೊಳಿಸುವಂತೆ ಅವರು ಸೂಚಿಸಿದರು.
ರಸ್ತೆ ಬದಿಯಲ್ಲಿ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಗಿಡಗಳನ್ನು ನೆಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಎಷ್ಟು ದೂರದಲ್ಲಿ ಗಿಡಗಳನ್ನು ನೆಡಬೇಕು ಎಂಬುದನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದುವರಿಯಬೇಕು ಎಂದು ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಗಾಲದಲ್ಲಿ ಜನ, ವಾಹನಗಳಿಗೆ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆ ನಿರ್ವಹಣೆ ನಡೆಸಲು ಇಲಾಖೆಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಂಜು ತಿಳಿಸಿದರು.