ಜಿಲ್ಲೆ

ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ

ಪಂಕಜ ಕೆ.ಎಂ.

ಬೆಂಗಳೂರು: ಪ್ರಸಕ್ತ (2025-26) ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1 ಸಾವಿರ ರೂ. ಹೆಚ್ಚಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರದ ಈ ಘೋಷಣೆ ಅನ್ವಯ ಆಯುಷ್ಮಾನ್ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡಲಾಗುತ್ತದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಸಾವಿರ ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯರನ್ನು ಆಯ್ಕೆ ಮಾಡಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 42,524 ಹುದ್ದೆಗಳು ಮಂಜೂರಾಗಿದ್ದು, ರಾಜ್ಯದಲ್ಲಿ ಸದ್ಯ 41 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆದೇಶದಲ್ಲಿ ಹೇಳಿದೆ.