ಬೆಟ್ಟದಪುರ: ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ನೀಡುವ ಅತ್ಯುತ್ತಮ ಪ್ರೌಢಶಾಲೆ ಪ್ರಶಸ್ತಿ ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಗೆ ಲಭಿಸಿದೆ.
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮವಾದ ಶಾಲೆಗಳನ್ನು ಗುರುತಿಸುವ ಕಾರ್ಯವನ್ನು ಟ್ರಸ್ಟ್ ಹಮ್ಮಿಕೊಂಡಿದ್ದು, 2024ನೇ ಸಾಲಿನ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ಅತ್ತಿಗೋಡು ಶಾಲೆ ಆಯ್ಕೆಯಾದ ಹಿನ್ನೆಲೆಯಲ್ಲಿ ಒಂದು ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ನಾಗಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿದರಲ್ಲದೆ, ವೈಯಕ್ತಿಕವಾಗಿ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿಗೂ ಪಾತ್ರರಾದರು. ಇವರಿಗೆ 25 ಸಾವಿರ ರೂ. ಮತ್ತು ಪ್ರಶಸ್ತಿ ಫಲಕ ನೀಡಿ ಸದ್ಗುರು ಮಧುಸೂದನ್ ಸಾಯಿ ಅವರು ಗೌರವಿಸಿದರು.