ಜಿಲ್ಲೆ

ಬಾಲ್ಯವಿವಾಹ ಪ್ರಕರಣಗಳ ವಿರುದ್ಧ ಜಾಗೃತಿ

ಡಿ.ಪಿ.ನಾಗರಾಜ ಶ್ರೇಷ್ಠಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಬಾಲ್ಯವಿವಾಹ, ಬಾಲ ಗರ್ಭಿಣಿಯರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಜಾಗೃತಿ ಮೂಡಿಸುವಂತೆ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಸಮಯದಲ್ಲಿ ಡೆಂೆ, ಚಿಕೂನ್‌ಗುನ್ಯಾದಂಥಹ ಕೀಟಜನ್ಯ ರೋಗ ಪ್ರಕರಣಗಳು ಹೆಚ್ಚಾಗುವ ಸಂಭವವಿದೆ. ರೋಗಗಳ ನಿಯಂತ್ರಣಕ್ಕಾಗಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಕ್ಷಯ ಮುಕ್ತ ಗ್ರಾಪಂಗೆ ಸಹಕಾರ: ಕ್ಷಯ ಮುಕ್ತ ಗ್ರಾಪಂ ಘೋಷಣೆಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಿಡಿಒಗಳ ಸಹಕಾರ ಅಗತ್ಯವಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಒ. ಸುಧಾ ಹೇಳಿದರು.

ಗ್ರಾಮ ಸಭೆಗಳಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಕ್ಷಯಮುಕ್ತ ಗ್ರಾಪಂ ಘೋಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.

ಜುಲೈ 31ರವರೆಗೆ ಅಂದೋಲನ:

ಜಿಲ್ಲೆಯಲ್ಲಿ ಜೂ.16 ರಿಂದ ಪ್ರಾರಂಭವಾಗಿರುವ ಅತಿಸಾರ ಭೇದಿ ನಿಯಂತ್ರಣ ಅಂದೋಲನ ಜುಲೈ 31 ರವರೆಗೆ ನಡೆಯಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಅಭಿನವ್ ಹೇಳಿದರು.

ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಚಂದ್ರಶೇಖರ್ ಕಂಬಾಳಿಮಠ್, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಿ. ಬಗಾಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್‌ಕುಮಾರ್ ಇತರರು ಇದ್ದರು.