ಪಡುಬಿದ್ರಿ: ಭಾರತದಲ್ಲಿ ತಾಯಂದಿರಿಂದ ಕುಟುಂಬ ವ್ಯವಸ್ಥೆ ಉಳಿದಿದೆ. ಜ್ಞಾನ ವಿಕಾಸದ ಮೂಲಕ ಮಹಿಳೆಯರಲ್ಲಿ ಜಾಗೃತಿ ಕಾರ್ಯ ನಡೆಯುತ್ತಿರುವುದು ಉತ್ತಮ ಕಾರ್ಯಕ್ರಮ. ಇದರೊಂದಿಗೆ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾಪು ತಾಲೂಕು ಹಾಗೂ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಸಹಯೋಗದೊಂದಿಗೆ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ತಾಲೂಕುಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಪು ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹಾಗೂ ಕಾಪು ಕ್ಷೇತ್ರದ ಶಾಸಕರನ್ನು ಸನ್ಮಾನಿಸಲಾಯಿತು. ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಕುರಿತು ಕುಂದಾಪುರದ ಆಪ್ತ ಸಮಾಲೋಚಕಿ ಸ್ವರ್ಣ ವಿಚಾರ ಮಂಡಿಸಿದರು. ತಹಸೀಲ್ದಾರ್ ಪ್ರತಿಭಾ ಆರ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಕರಾವಳಿ ಪ್ರಾದೇಶಿಕ ಕಚೆೇರಿ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ, ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ, ನವೀನ್ ಅಮೀನ್ ಶಂಕರಪುರ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಕೇಂದ್ರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪುಷ್ಪ ಗುಚ್ಛ ಸ್ಪರ್ಧೆ, ರಂಗೋಲಿ ಸ್ಪರ್ಧೆ ನಡೆಯಿತು.