ಮಂಡ್ಯ: ಗ್ರಾಮೀಣ ಜನರಿಗೆ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಗಳ ಬಗ್ಗೆ ಮಾಹಿತಿಯ ಅವಶ್ಯಕತೆ ಇದೆ. ಆದ್ದರಿಂದ ಅವರು ಇರುವ ಸ್ಥಳಕ್ಕೆ ಹೋಗಿ ಜಾಗೃತಿ ಮತ್ತು ನೋಂದಣಿ ಆಂದೋಲನವನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ದತ್ತೋಪಂತ್ ತೆಂಗಾಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಮತ್ತು ಅಭಿವೃದ್ದಿ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್‌ಕುಮಾರ್ ತಿಳಿಸಿದರು.
ತಾಲೂಕಿನ ಕೆರಗೋಡು ಗ್ರಾಮದಲ್ಲಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ, ಕೆರಗೋಡು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಅಸಂಘಟಿತ ವಲಯಗಳ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಗಳ ಕುರಿತ ಜಾಗೃತಿ ಮತ್ತು ನೋಂದಣಿ ಆಂದೋಲನದಲ್ಲಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮನೆ ಬಾಗಿಲಿಗೆ ತಲುಪಲು ಈ ಕಾರ್ಯಕ್ರಮ ಉಪಯೋಗವಾಗಿವೆ. ಬಹುಮುಖ್ಯವಾಗಿ ಕೇಂದ್ರ ಸರ್ಕಾರದ ಯೋಜನೆಗಳಾದ ಇ-ಶ್ರಮ ಪೋರ್ಟಲ್, ಅಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಪಿಂಚಣಿ ಯೋಜನೆಗಳು ಸಾರ್ವತ್ರೀಕರಣಗೊಳ್ಳಬೇಕಿದೆ. ಯೋಜನೆಗಳು ಫಲಪ್ರದವಾಗಬೇಕಾದರೆ ಅರವಿನ ಅವಶ್ಯಕತೆ ಇದೆ. ಪ್ರತಿಯೊಬ್ಬ ಪ್ರಜೆಗೂ ಇದರ ಉಪಯೋಗ ಆಗಬೇಕು. ಮಂಡ್ಯ ತಾಲೂಕಿನಲ್ಲಿ 7 ಗ್ರಾಮ ಪಂಚಾಯಿತಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ವಿವಿಧ ಯೋಜನೆಯಡಿ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ನೋಂದಾಯಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್‌ಕುಮಾರ್ ಉದ್ಘಾಟಿಸಿದರು. ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷೆ ನಾಗಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಮಹೇಶ್, ಶಾಂತಮ್ಮ, ದಿವಾಕರ್, ಶಾಂತಗಿರಿ, ಪ್ರೊಬೆಷನರಿ ಜಿಲ್ಲಾ ಉದ್ಯೋಗಾಧಿಕಾರಿ ಕನ್ನಯ್ಯಕುಮಾರ್, ಪಿಡಿಒ ಸುನೀಲ್, ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ಗಿರೀಶ್, ಸಂಪನ್ಮೂಲ ವ್ಯಕ್ತಿ ಅರುಣಕುಮಾರಿ ಇದ್ದರು.