ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳ ಸಭೆ ನಡೆಸಿದರು. ಎಸ್‌ಪಿ ಲಕ್ಷ್ಮಣ ನಿಂಬರಗಿ, ಎಎಸ್‌ಪಿ ಶಂಕರ ಮಾರಿಹಾಳ, ಎಸಿ ಗುರುನಾಥ ದಡ್ಡೆ ಮತ್ತಿತರರಿದ್ದಾರೆ.  
ಜಿಲ್ಲೆ

ಮಾದಕ ದ್ರವ್ಯ ಕಡಿವಾಣಕ್ಕೆ ಜಾಗೃತಿ ಅವಶ್ಯ; ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ಮಾದಕ ದ್ರವ್ಯಗಳ ಕಡಿವಾಣಕ್ಕೆ ಸಾರ್ವಜನಿಕರಲ್ಲಿ ಸೂಕ್ತ ಜಾಗೃತಿಯೊಂದಿಗೆ ಮಾದಕ ದ್ರವ್ಯ ಸೇವಿಸುವವರನ್ನು ಪರೀಕ್ಷೆಗೊಳಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯ ಮೇಲೆ ಬೀರುವ ದುಷ್ಪರಿಣಾಮಗಳ ಜಾಗೃತಿ ಜೊತೆಗೆ ಮಾದಕ ವಸ್ತು-ದ್ರವ್ಯ ಸೇವನೆಗೊಳಗಾದವರಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಬೇಕು. ಇದರಿಂದ ಜನರಲ್ಲಿ ಅತಿಯಾಗಿ ಜಾಗೃತಿ ಮೂಡುವುದರೊಂದಿಗೆ ಭಯದಿಂದ ಮಾದಕ ವಸ್ತುಗಳ ಬಳಕೆ ಪ್ರಮಾಣ ತಗ್ಗಲು ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಸಂಬಂಧಿಸಿದ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಸಾರಾಯಿ ತಯಾರಿಕೆ ಸ್ಥಳಗಳ ಮೇಲೆ ಅನಿರೀಕ್ಷಿತವಾಗಿ ದಾಳಿ ನಡೆಸಿ ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮಾದಕ ದ್ರವ್ಯ ನಿರ್ಮೂಲನೆಗೆ ಸಂಬಂಧಿಸಿದ ಇಲಾಖೆಗಳ ಸಹಯೋಗ ಅಗತ್ಯವಾಗಿದ್ದು, ಅಬಕಾರಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ-ಸಂಗ್ರಹಣೆ ಬಗ್ಗೆ ತೀವ್ರ ನಿಗಾ ಇಡಬೇಕು. ಮಾದಕ ದ್ರವ್ಯ ಬೆಳೆಯುವಂತಹ ಸಸಿ, ಗಿಡಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಿಗಾ ಇರಿಸಿ ಕ್ರಮ ವಹಿಸಬೇಕು. ಔಷಧ ನಿಯಂತ್ರಕ ಇಲಾಖೆ ಅಧಿಕಾರಿಗಳು, ಔಷಧ ಮಳಿಗೆಗಳಲ್ಲಿ ಕಡ್ಡಾಯವಾಗಿ ಡಾಕ್ಟರ್ ಅನುಮತಿ ಪತ್ರ ಪಡೆದು ಔಷಧ ಮಾರಾಟಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯ ಎಲ್ಲ ಶಾಲಾ ಕಾಲೇಜ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯಾದ್ಯಂತ ಅಕ್ರಮವಾಗಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗುತ್ತಿದ್ದು, ತಂಡವೊಂದರನ್ನು ರಚಿಸಿಕೊಂಡು ಇಂತಹ ಸ್ಥಳಗಳನ್ನು ಗುರುತಿಸಿ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟವಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುತ್ತಿರುವುದರಿಂದ ಕಳ್ಳಭಟ್ಟಿ ಸಾರಾಯಿ ಯಥೇಚ್ಛವಾಗಿ ಮಾರಾಟವಾಗುವ ಸಂಭವವಿರುವುದರಿಂದ ಅಬಕಾರಿ ಇಲಾಖೆ ಅಧಿಕಾರಿಗಳು ಈ ಕುರಿತು ತೀವ್ರ ನಿಗಾ ವಹಿಸಬೇಕು. ಇಂತಹ ಅಕ್ರಮ ಚಟುವಟಿಕೆಗಳ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಇದರಿಂದ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಯಾದ್ಯಂತ ಎಲ್ಲ ಅಕ್ರಮಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯು ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾಗಿರುವುದರಿಂದ ಅಕ್ರಮಗಳಿಗೆ ವಿಶೇಷ ಕಾಳಜಿ ವಹಿಸುವುದು ಅತ್ಯವಶ್ಯಕವಾಗಿದೆ. ಅಕ್ರಮ ಮದ್ಯ ಸಾಗಾಣಿಕೆಯಂತಹ ಚಟುವಟಿಕೆಗಳ ಮೇಲೆ ತೀವ್ರ ಎಚ್ಚರಿಕೆ ವಹಿಸಿ ಗಡಿಭಾಗದಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಕಟ್ಟೆಚ್ಚರ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಎಎಸ್‌ಪಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ವಿನಯಕುಮಾರ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೋಳಿ, ಅಬಕಾರಿ ಇಲಾಖೆ ಉಪ ಆಯುಕ್ತ ಮುರಳಿಧರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ ಹೊಸಮನಿ, ಪೀಟರ್ ಅಲೆಕ್ಸಾಂಡರ್ ಮತ್ತಿತರರಿದ್ದರು.