ಬೆಳಗಾವಿ: ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಪರಿಷ್ಕರಣೆ ಸಿದ್ಧತೆ, ಸ್ವೀಪ್ ಕಾರ್ಯಕ್ರಮ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದೆ ಎಂದರು.
ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತು ಎಲ್ಲ ಹಂತದಲ್ಲಿ ಜನಸಾಮಾನ್ಯರಿಗೆ ಮಾಹಿತಿ ತಿಳಿಯಲು ಬ್ಯಾನರ್, ಕರ ಪತ್ರ ಹೀಗೆ ವಿವಿಧ ಚಟುವಟಿಕೆಗಳ ಮೂಲಕ ಜನರಿಗೆ ತಲುಪುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಅತಿ ಮುಖ್ಯವಾಗಿದ್ದು, ಜನರು ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ ಶಿಂಧೆ ಮಾತನಾಡಿ, ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಸೇರಿ ಚುನಾವಣೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳನ್ನು ಸ್ವೀಪ್ ಮೂಲಕ ಮಾಡಲಾಗುತ್ತಿದೆ. ಕಳೆದ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಪ್ರಮುಖ ಪಾತ್ರ ವಹಿಸಿದೆ. ಶಾಲಾ&ಕಾಲೇಜುಗಳಲ್ಲಿ ಕೂಡ ಜಾಗೃತಿ ಮೂಡಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಮಹಾನಗರ ಪಾಲಿಕೆ ಉಪಆಯುಕ್ತೆ ರೇಷ್ಮಾ ತಾಳಿಕೋಟಿ, ಉದಯಕುಮಾರ ತಳವಾರ, ಡಿಡಿಪಿಯು ಎಂ.ಎಂ. ಕಾಂಬಳೆ, ಜಿಲ್ಲಾ ಪಿಯು ನೋಡಲ್ ಅಧಿಕಾರಿ ಎಂ.ಎ.ಮುಲ್ಲಾ, ಡಿಡಿಪಿಐ ಲೀಲಾವತಿ ಹಿರೇಮಠ, ಡಾ.ಐ.ಪಿ.ಗಡಾದ ಇತರರಿದ್ದರು.