ಜಿಲ್ಲೆ

ಭ್ರಷ್ಟಾಚಾರ ನಿರ್ಮೂಲನೆಗೆ ಅಗತ್ಯ ಸಾರ್ವಜನಿಕರ ಸಹಕಾರ : ಲೋಕಾಯುಕ್ತ ಡಿವೈಎಸ್‌ಪಿ ಡಾ.ಗಾನ ಪಿ.ಕುಮಾರ್ ಆಶಯ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಕಡಬ

ಸರ್ಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾದಲ್ಲಿ ಲೋಕಾಯುಕ್ತ ಸಂಸ್ಥೆಗೆ ಸಾರ್ವಜನಿಕರು ಮುಕ್ತವಾಗಿ ದೂರು ನೀಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಭ್ರಷ್ಟಾಚಾರದ ವಿರುದ್ಧವಿರುವ ಲೋಕಾಯುಕ್ತದ ಕಾರ್ಯದೊಂದಿಗೆ ಸಾರ್ವಜನಿಕರು ಕೈ ಜೋಡಿಸಿದಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಬಹುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಡಾ.ಗಾನ ಪಿ.ಕುಮಾರ್ ಹೇಳಿದರು.

ಕರ್ನಾಟಕ ಲೋಕಾಯುಕ್ತ ಮಂಗಳೂರು ಠಾಣಾ ವತಿಯಿಂದ ಭ್ರಷ್ಟಾಚಾರ ವಿರುದ್ಧ ಅರಿವು ಸಪ್ತಾಹ ಅಂಗವಾಗಿ ಕಡಬ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಮಾಣವಚನ ಬೋಧಿಸಿ ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚದ ಬೇಡಿಕೆ ಇಟ್ಟಿರುವ ಬಗ್ಗೆ, ಅರ್ಜಿಗಳ ವಿಲೇವಾರಿ ಮಾಡುವಲ್ಲಿ ವಿಳಂಬಿಸಿದಲ್ಲಿ ಸರ್ಕಾರಿ ಹಣದ ದುರ್ಬಳಕೆ ಹಾಗೂ ಇನ್ನಿತರ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದಲ್ಲಿ ನೇರವಾಗಿ ಲೋಕಾಯುಕ್ತ ಸಂಸ್ಥೆಯನ್ನು ಸಂಪರ್ಕಿಸಿ ದೂರು ನೀಡಬಹುದು ಎಂದರು.

ಲೋಕಾಯುಕ್ತ ಎಸ್.ಐ.ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಉಪಸ್ಥಿತರಿದ್ದರು. ಲೋಕಾಯುಕ್ತ ಎಸ್.ಐ.ಚಂದ್ರಶೇಖರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿ ಮಹೇಶ್ ನಿರೂಪಿಸಿದರು. ಕಡಬ ಪೊಲೀಸ್ ಠಾಣಾ ಹೆಡ್‌ಕಾನ್‌ಸ್ಟೆಬಲ್ ಹರೀಶ್ ವಂದಿಸಿದರು.