ಚಿಕ್ಕಮಗಳೂರು: ಅತಿವೃಷ್ಟಿ, ಪ್ರವಾಹ, ಸುನಾಮಿಯಂತಹ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಎನ್‌ಡಿಆರ್‌ಎಫ್ ತಂಡ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಅಂಬಳೆ ಕೈಗಾರಿಕಾ ಪ್ರದೇಶದಲ್ಲಿರುವ ಲೈಫ್‌ಲೈನ್ ಫೀಡ್ಸ್‌ನ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್.ಡಿ.ಆರ್.ಎಫ್) ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯು ಹಲವಾರು ವರ್ಷಗಳಿಂದ ಭೂಕುಸಿತ, ಪ್ರವಾಹ ಮತ್ತು ಬರಗಾಲ ಸೇರಿದಂತೆ ಅನೇಕ ಪ್ರಾಕೃತಿಕ ದುರಂತಗಳನ್ನು ಎದುರಿಸಿಕೊಂಡು ಬಂದಿದೆ. 2019ನೇ ಸಾಲಿನಲ್ಲಿ ಉಂಟಾದ ಭೂಕುಸಿತ, ಪ್ರವಾಹ ಪರಿಸ್ಥಿತಿ ಪ್ರಸ್ತಾಪಿಸಿದ ಅವರು, ಈ ಸಂದರ್ಭದಲ್ಲಿ ಜಿಲ್ಲಾಡಳಿತ ಕೈಗೊಂಡ ಕಾರ್ಯವನ್ನು ಶ್ಲಾಘಿಸಿದರು. ಜಿಲ್ಲೆಯ ಸಾರ್ವಜನಿಕರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಪಂ ಸಿಇಒ ಡಾ.ಗೋಪಾಲಕೃಷ್ಣ ಮಾತನಾಡಿ, ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ ಹಾಗೂ ಕೊಪ್ಪ ತಾಲೂಕಿನಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಜ.26ರಂದು ಚಿಕ್ಕಮಗಳೂರು ತಾಲೂಕಿನಲ್ಲಿ ಕಾರ್ಯಾಗಾರ ಮುಕ್ತಾಯವಾಗಲಿದೆ ಎಂದು ತಿಳಿಸಿದರು