ಬಾಗಲಕೋಟೆ: ಕೋವಿಡ್ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿ ಕೆ. ರಾಜೇಂದ್ರ ಜತೆ ಸೋಮವಾರ ವಿಡಿಯೋ ಸಂವಾದ ನಡೆಸಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಕೆ. ರಾಜೇಂದ್ರ, ಜಿಲ್ಲೆಯ ಕೋವಿಡ್ ಸ್ಥಿತಿಗತಿ, ನಿಯಂತ್ರಣ ಕ್ರಮಗಳು, ಜಿಲ್ಲೆಯ ಮಳೆ, ಬೆಳೆ, ರಸಗೊಬ್ಬರ ಲಭ್ಯತೆ, ಪ್ರವಾಹ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಸ್ಯಾಂಪಲ್ ಪರೀಕ್ಷೆ ಮಾಡುವ ಪಿಸಿಆರ್ ಯಂತ್ರ ಮಂಗಳವಾರದಿಂದಲೇ ಆರಂಭವಾಗಲಿದೆ ಎಂದರು.
ವಿಜಯಪುರದಿಂದ ಬಾಗಲಕೋಟೆ ಕೋವಿಡ್ ಸ್ಥಿತಿಗತಿ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾದಲ್ಲಿ ಕುಮಾರೇಶ್ವರ ಆಸ್ಪತ್ರೆಯಲ್ಲಿ ಸಾವಿರ ಬೆಡ್‌ವರೆಗೆ ನೀಡುವುದಾಗಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದ್ದು, ಅಲ್ಲಿರುವ ಇತರ ರೋಗಿಗಳನ್ನು ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಬಾಗಲಕೋಟೆ ಜಿಲ್ಲೆಯನ್ನು ಸದ್ಯಕ್ಕೆ ಲಾಕ್‌ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತು ಜಿಲ್ಲಾಧಿಕಾರಿ ಕೆ. ರಾಜೇಂದ್ರ ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಸಂವಾದದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಯಶವಂತ ಗೋರಕಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎ.ಎನ್.ದೇಸಾಯಿ, ಜಿಲ್ಲಾ ಶಸ ಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಸೇರಿ ಇತರರು ಇದ್ದರು.