ಜಿಲ್ಲೆ

ಆರೋಗ್ಯವಂತ ಮಗು ಸಮಾಜಕ್ಕೆ ಆಸ್ತಿ

ಬಾಗಲಕೋಟೆ: ಮಹಿಳೆಯರು ಆರೋಗ್ಯವಂತರಾಗಿದ್ದಾಗ ಮಾತ್ರ ಸಮಾಜಕ್ಕೆ ಉತ್ತಮವಾದ ಮಗುವನ್ನು ಕೊಡಲು ಸಾಧ್ಯವಾಗುತ್ತದೆ ಎಂದು ಬಾಗಲಕೋಟೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚನ್ನನಗೌಡ ಪರನಗೌಡರ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಮಂಗಳವಾರ ಬಾಗಲಕೋಟೆ ತಾಲೂಕಾ ಆಡಳಿತ, ತಾಲೂಕಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಪೋಷನ್ ಮಾಸಾಚರಣೆ, ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ಹಾಗೂ ಕೋವಿಡ್ ವಾರಿಯರ‌್ಸಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸನಾ ಪ್ರಮಾಣ ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹುಟ್ಟಿದ ಮಗುವಿಗೆ ತಾಯಿಯ ಹಾಲು ಶ್ರೇಷ್ಠವಾಗಿದ್ದು, ಇದರಿಂದ ಮಗು ಸದೃಢವಾಗಿ ಬೆಳೆಯಲು ಸಾಧ್ಯವಾಗುತ್ತದೆ. ಒಳ್ಳೆಯ ಆಹಾರ ಸೇವನೆ ಮಾಡುವದರಿಂದ ಆರೋಗ್ಯವಂತ ಮಗು ನೀಡಲು ಸಾಧ್ಯವಾಗುತ್ತದೆ. ಅದಕ್ಕೆ ಸರ್ಕಾರ ಗರ್ಭೀಣಿಯರಿಗೆ ಹಾಗೂ ಭಾಣಂತಿಯರಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆ ಜಾರಿಗೆ ತಂದಿದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಂಗನವಾಡಿ ಕಟ್ಟಡ ದುರಸ್ಥಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಾಗಿಲು, ಕಿಡಕಿ ದುರಸ್ತಿ ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಮಹಿಳೆಯರಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಒಳ್ಳೆಯ ನೀರು ಮತ್ತು ಆಹಾರ ಸೇವನೆಯಿಂದ ಆರೋಗ್ಯವಂತಾಗಿರಲು ಸಾಧ್ಯವಾಗುತ್ತದೆ. ಕೋವಿಡ್ ಹಿನ್ನಲೆಯಲ್ಲಿ ಎಲ್ಲರೂ ಬಿಸಿ ನೀರು ಕುಡಿಯುತ್ತಿದ್ದು, ಇದರ ಜೊತೆ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಸಹ ಸೇವಿಸಬೇಕು. ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದಾರೆ. ಮದುವೆಯ ವಯಸ್ಸಿಗೆ ಬಂದಾಗ ಅನುಕೂಲವಾಗಲಿದೆ. 180 ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೋವಿಡ್ ವಾರಿಯರ‌್ಸಗಳಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ತಹಸೀಲ್ದಾರ ಗುರುಸಿದ್ದಯ್ಯ ಹಿರೇಮಠ, ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ವೈ.ಬಸರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಸಿ.ಶಿವಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಐ.ಸಿ.ಡಿ.ಸಿ ವಿಭಾಗದ ಅಧಿಕ್ಷಕಿ ಜಯಮಾಲಾ ದೊಡಮನಿ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಸುರೇಖಾ ಅಂಬಳಗಿ ವಂದಿಸಿದರು.

EndFragment