ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಸಿಇಒ ಶಶಿಧರ ಕುರೇರ ವೀಕ್ಷಣೆ ಮಾಡಿದರು. 
ಬಾಗಲಕೋಟೆ

ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ

ದತ್ತಾತ್ರೇಯ ಪಿ ಕುಲಕರ್ಣಿ

ಪ್ರಮುಖ ಮುಖ್ಯಾಂಶಗಳು

  • ಜಿ.ಪಂ. ಸಿಇಒ ವಿವಿಧೆಡೆ ಅನಿರೀಕ್ಷಿತ ಭೇಟಿ
  • ಪ್ರಗತಿ ಸಾಧಿಸದಿದ್ದರೆ ಕ್ರಮ ನಿಶ್ಚಿತ
  • ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
ಬಾಗಲಕೋಟೆ: ಬಾದಾಮಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವಾ ಸಂಬಂಧಿತ ಕಾಮಗಾರಿಗಳ ಸ್ಥಳಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿ ನೀಡಿದ ಸಮಯದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಸ್ವಚ್ಛತೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿ ಪರಿಶೀಲಿಸಿದರು.
ಬಾದಾಮಿ ತಾಲೂಕಿನ ಹೂಲಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಕಸ ವಿಲೇವಾರಿ ಘಟಕದ ಕಾಮಗಾರಿ ಪರಿಶೀಲಿಸಿ, ಘನ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಕಾಮಗಾರಿಗಳಲ್ಲಿ ನಿರ್ಲಕ್ಷೃ ತೋರಿದರೆ ಹಾಗೂ ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್‌ನಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ ವೀಕ್ಷಣೆ ಮಾತನಾಡಿ, ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಕಾಮಗಾರಿಗಳಲ್ಲಿ ವಿಳಂಬವಾದರೆ ಅಥವಾ ನಿರೀಕ್ಷಿತ ಪ್ರಗತಿ ಸಾಧಿಸದಿದ್ದರೆ ಯಾವುದೇ ರೀತಿಯ ಸಡಿಲಿಕೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಿಇಒ ಶಶಿಧರ ಕುರೇರ ಅಲ್ಲಿನ ಔಷಧ ದಾಸ್ತಾನು, ಸ್ವಚ್ಛತೆ ಮತ್ತು ಮೂಲ ಸೌಕರ್ಯ ಪರಿಶೀಲಿಸಿ, ಸಾರ್ವಜನಿಕರಿಗೆ ನಿರಂತರ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ಡಿಸಿಸಿ ಬ್ಯಾಂಕ್ ಆಡತಾಧಿಕಾರಿಯಾಗಿರುವ ಸಿಇಒ ಶಶಿಧರ ಕುರೇರ ಅವರು, ಕೆರೂರಿನ ಬಿಡಿಸಿಸಿ ಬ್ಯಾಂಕ್‌ಗೆ ಭೇಟಿ ನೀಡಿ, ಬ್ಯಾಂಕಿನ ಕಾರ್ಯ ವೈಖರಿ, ಗ್ರಾಹಕ ಸೇವೆ, ಸಾಲ ವಿತರಣೆ ಹಾಗೂ ರೈತರು ಮತ್ತು ಸ್ವಸಹಾಯ ಸಂಘಗಳಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ಸಮಯೋಚಿತ ಸೇವೆ ಒದಗಿಸುವಂತೆ ಬ್ಯಾಂಕ್ ಸಿಬ್ಬಂದಿಗೆ ಸೂಚನೆ ನೀಡಿದರು.