ಜಮಖಂಡಿ ತಾಲೂಕಿನ ಚಿಕ್ಕಲಕಿ-ತೊದಲಬಾಗಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವಂತೆ ರೈತರು ಚಿಕ್ಕಲಕಿ ಕ್ರಾಸ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು, ಗ್ರಾಮಸ್ಥರು ಹಾಗೂ ವ್ಯಾಪಾರಸ್ಥರು ಇತರರಿದ್ದರು.
- ಚಿಕ್ಕಲಕಿ- ತೊದಲಬಾಗಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ |
- ಅಂಗಡಿ-ಮುಂಗಟ್ಟು ಬಂದ್
ಜಮಖಂಡಿ : ತಾಲೂಕಿನ ಬಹು ನಿರೀಕ್ಷಿತ ಚಿಕ್ಕಲಕಿ-ತೊದಲಬಾಗಿ ಏತ ನೀರಾವರಿ ಯೋಜನೆ ಕಾಮಗಾರಿ ವರ್ಷಗಳಾದರೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಶುಕ್ರವಾರ ಚಿಕ್ಕಲಕಿ ಕ್ರಾಸ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಯೋಜನೆ ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿ ನೂರಾರು ರೈತರು ಚಿಕ್ಕಲಕಿ ಕ್ರಾಸ್‌ನಲ್ಲಿ ಸೇರಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೆಲ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರೆ, ಇನ್ನೂ ಕೆಲವರು ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದರು. ರಸ್ತೆ ಮಧ್ಯೆ ಅಡುಗೆ ತಯಾರಿಸಿ ಅಲ್ಲಿಯೇ ಊಟ ಮಾಡುವ ಮೂಲಕ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.
ಯೋಜನೆ ವಿಳಂಬದಿಂದ ಕೃಷಿ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ನೀರಾವರಿ ಸೌಲಭ್ಯ ಸಿಗದ ಕಾರಣ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಹಲವು ವರ್ಷಗಳಿಂದ ಭರವಸೆಗಳನ್ನಷ್ಟೇ ನೀಡಲಾಗುತ್ತಿದ್ದು, ಕಾಮಗಾರಿ ಮಾತ್ರ ಪೂರ್ಣಗೊಳ್ಳುತ್ತಿಲ್ಲ ಎಂದು ರೈತರು ಆರೋಪಿಸಿದರು.
ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಚಿಕ್ಕಲಕಿ ಕ್ರಾಸ್‌ನ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ರೈತರ ನ್ಯಾಯಯುತ ಬೇಡಿಕೆಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ವ್ಯಾಪಾರಸ್ಥರು ತಿಳಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಚಿಕ್ಕಲಕಿ ಕ್ರಾಸ್‌ನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳದಲ್ಲೇ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ವಿವಿಧ ಗ್ರಾಮಗಳ ರೈತರು, ಗ್ರಾಮಸ್ಥರು ಹಾಗೂ ವ್ಯಾಪಾರಸ್ಥರು ಭಾಗವಹಿಸಿ ಯೋಜನೆ ಪೂರ್ಣಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.