ವಿಜಯವಾಣಿ ಸುದ್ದಿಜಾಲ ಬಾಗಲಕೋಟೆ
ಹಿರಿಯ ನಾಗರಿಕರಿಗೆ ಗೌರವ, ಪ್ರೀತಿ ಹಾಗೂ ಕಾಳಜಿ ತೋರುವ ಸಂಸ್ಕಾರವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಕ್ಷೇಮಾಭಿವೃದ್ಧಿ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹಿರಿಯರಿಗೆ ಗೌರವ ನೀಡುವ ಸಂಸ್ಕಾರ ಕಡಿಮೆಯಾಗುತ್ತಿದ್ದು, ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣ ನೀಡಿ, ವೈದ್ಯರು, ಇಂಜಿನಿಯರ್‌ಗಳಾಗಿ ಮಾಡಬೇಕೆಂಬ ಕನಸು ಕಾಣುತ್ತಾರೆ. ಮಕ್ಕಳ ಉನ್ನತ ಶಿಕ್ಷಣ ಹಾಗೂ ಭವಿಷ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅವರನ್ನು ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ದೇಶ-ವಿದೇಶಗಳಿಗೆ ಕಳುಹಿಸುತ್ತಾರೆ. ಆದರೆ, ವೃದ್ಧಾಪ್ಯದಲ್ಲಿ ಪಾಲಕರಿಗೆ ಮಕ್ಕಳ ಆರೈಕೆ ದೊರೆಯದಂತಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ವೃದ್ಧಾಪ್ಯದಲ್ಲಿ ಪಾಲಕರನ್ನು ಪ್ರೀತಿ, ಗೌರವದಿಂದ ಕಾಣುವುದು ಮಕ್ಕಳ ಕರ್ತವ್ಯವಾಗಿದೆ. ಹಿರಿಯ ನಾಗರಿಕರ ರಕ್ಷಣೆಗೆ ಕೇವಲ ಕಾನೂನುಗಳಿಂದ ಸಾಧ್ಯವಿಲ್ಲ. ಪ್ರತಿಯೊಬ್ಬರ ಮನಸ್ಸಿನಲ್ಲಿ ಪರಿವರ್ತನೆ ಉಂಟಾದಾಗ ಮಾತ್ರ ಸಾಧ್ಯವೆಂದರು.
ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಮಾತನಾಡಿ, ಮಕ್ಕಳು ಚಿಕ್ಕವರಿದ್ದಾಗ ಅವರನ್ನು ಪಾಲನೆ, ಪೋಷಣೆ ಮಾಡಿ ಉತ್ತಮ ಜೀವನ ರೂಪಿಸಿಕೊಟ್ಟ ತಂದೆ-ತಾಯಿಗಳನ್ನು ಅವರ ಮುಪ್ಪಿನ ಸಂದರ್ಭದಲ್ಲಿ ಬಿಟ್ಟು ಹೋಗುವುದು ಎಷ್ಟು ಸರಿ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಿರಿಯರ ಮೇಲಿನ ಭಕ್ತಿ, ಗೌರವ ಹಾಗೂ ಕುಟುಂಬದ ಮೌಲ್ಯಗಳು ನಶಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂದಿನ ಹುಡುಗರು ಸರಿಯಾದ ಮಾರ್ಗದಲ್ಲಿ ಸಾಗಬೇಕಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮಾತನಾಡಿ, ಮಕ್ಕಳ ಮೇಲೆ ಅತಿಯಾದ ಪ್ರೀತಿ ಮತ್ತು ಕಾಳಜಿ ಇರಬೇಕು. ಅದೇ ಸಂದರ್ಭದಲ್ಲಿ ಅವರು ಭವಿಷ್ಯದಲ್ಲಿ ಸ್ವಾವಲಂಬಿಯಾಗಿ ಬದುಕುವಂತೆ ಬೆಳೆಸುವುದು ಕೂಡ ಪಾಲಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಪೂರ್ಣಾನಂದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಽಕಾರಿ ಮಹಾಂತೇಶ ಕುರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಽಕಾರಿ ಮಂಜುನಾಥ ಪರಸನ್ನವರ, ಹಿರಿಯ ನಾಗರಿಕರಾದ ತಾತಾಸಾಹೇಬ ಬಾಂಗಿ, ಪರಶುರಾಮ ದರೆಗೋಳ, ಎಸ್.ಎಸ್.ಬೆಳಗಲಿ ಇತರರು ಉಪಸ್ಥಿತರಿದ್ದರು.