ಬಾಗಲಕೋಟೆ ನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಭೆ ನಡೆಯಿತು. ಡಿಸಿ ಸಂಗಪ್ಪ, ಜಿ.ಪಂ. ಸಿಇಒ ಶಶಿಧರ ಕುರೇರ, ಎಸ್ಪಿ ಸಿದ್ಧಾರ್ಥ ಗೋಯಲ್ ಮತ್ತಿತರ ಅಧಿಕಾರಿಗಳು ಇದ್ದರು. 
ಬಾಗಲಕೋಟೆ

ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆ ಯಶಸ್ವಿಗೊಳಿಸಿ

ಪ್ರಮುಖ ಮುಖ್ಯಾಂಶಗಳು

  • ಸಚಿವ ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ
  • ಸಿಎಂ ಸೇರಿ ಸಚಿವರು, ಶಾಸಕರು, ಗಣ್ಯರು ಭಾಗಿ
ಬಾಗಲಕೋಟೆ: ಜಿಲ್ಲೆಯಲ್ಲಿ ಮಾ. 14ರಂದು ನಡೆಯಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲು ಬಾಗಲಕೋಟೆ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಯಶಸ್ವಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮ ಅಚ್ಚುಕಟ್ಟಾಗಿ, ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಶಿಷ್ಟಾಚಾರ, ಆಹಾರ, ವೇದಿಕೆ, ವಸತಿ ಸೇರಿ ಇತರೆ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ತಮಗೆ ವಹಿಸಿಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮಕ್ಕೆ ಅಂದಾಜು 25 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮ ವೀಕ್ಷಣೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಸಮಿತಿಗಳಿಗೆ ಸೂಚನೆ ನೀಡಿದರು.
ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆ, ಭದ್ರತಾ ವ್ಯವಸ್ಥೆ, ಸಂಚಾರಿ ನಿಯಂತ್ರಣ ಹಾಗೂ ವೈದ್ಯಕೀಯ ಸೌಲಭ್ಯ ಸೇರಿ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕೆಲಸವಾಗಬೇಕು. ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ಎಲ್‌ಇಡಿ ಪರದೆಗಳನ್ನು ಸಹ ಹಾಕಲು ತಿಳಿಸಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರಲು ಬಸ್‌ಗಳ ವ್ಯವಸ್ಥೆ ಸಹ ಮಾಡಲು ತಿಳಿಸಿದರು.
ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕು. ವಿವಿಧ ಇಲಾಖೆಯ ಯೋಜನೆ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಭ್ಯಗಳನ್ನು ಸಹ ವಿತರಣೆ ಮಾಡಲಾಗುತ್ತಿದೆ. ಕಾರ್ಯಕ್ರಮವು ಮಹತ್ವದ್ದಾಗಿರುವದರಿಂದ ಪ್ರತಿಯೊಂದು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಾರಂಭವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಯುಕೆಪಿ ಮಹಾ ವ್ಯವಸ್ಥಾಪಕ ಗಜಾನನ ಬಾಲೆ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ ಸೇರಿ ವಿವಿಧ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.