ಬಾಗಲಕೋಟೆ ಜಿ.ಪಂ. ಸಭಾ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿ.ಪಂ., ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳು-2026 ಕುರಿತು ತರಬೇತಿ ಕಾರ್ಯಾಗಾರವನ್ನು ಜಿಲ್ಲಾಽಕಾರಿ ಸಂಗಪ್ಪ ಉದ್ಘಾಟಿಸಿದರು. ಬಿ.ಎಸ್. ರಾಘವೇಂದ್ರ, ರೇಣುಕಾ ಎಂ, ಸಿದ್ದರಾಮೇಶ್ವರ ಉಕ್ಕಲಿ ಮತ್ತಿತರರು ಇದ್ದರು.
- ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ
- ಅಧಿಕಾರಿಗಳ ತರಬೇತಿ ಕಾರ್ಯಾಗಾರ
ಬಾಗಲಕೋಟೆ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜಾರಿಗೊಳಿಸಿರುವ ಪರಿಷ್ಕೃತ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳು-2026ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡ ಘನತ್ಯಾಜ್ಯ ವಸ್ತು ನಿರ್ವಹಣಾ ನಿಯಮಗಳು-2026 ಕುರಿತು ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹೊಸ ನಿಯಮಗಳು ಮಹತ್ವದ ಪಾತ್ರ ವಹಿಸಲಿದ್ದು, ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿಗಳು ನಿಯಮಗಳ ಬಗ್ಗೆ ಸಂಪೂರ್ಣ ತರಬೇತಿಯನ್ನು ಪಡೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಹೊಸ ನಿಯಮಗಳ ಪ್ರಕಾರ ತ್ಯಾಜ್ಯವನ್ನು ಮೂಲದಲ್ಲಿಯೇ ಒಣ, ಹಸಿ, ಸ್ಯಾನಿಟರಿ ಹಾಗೂ ವಿಶೇಷ ಕಾಳಜಿ ತ್ಯಾಜ್ಯ ಎಂಬ ನಾಲ್ಕು ವಿಭಾಗಗಳಲ್ಲಿ ವಿಂಗಡಿಸುವುದು ಕಡ್ಡಾಯವಾಗಿದ್ದು, ಈ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಮನೆ ಮನೆ ತ್ಯಾಜ್ಯ ಸಂಗ್ರಹಣೆ, ವಿಂಗಡಣೆ, ಮರುಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ಉತ್ಪಾದಿಸುವ ಸಂಸ್ಥೆಗಳು ಮತ್ತು ವಾಣಿಜ್ಯ ಘಟಕಗಳು ತಮ್ಮ ತಾಜ್ಯವನ್ನು ಮೂಲದಲ್ಲಿಯೇ ಸಂಸ್ಕರಿಸುವ ಜವಾಬ್ದಾರಿ ಹೊಂದಿರುತ್ತವೆ. ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯು ಮಾಡಬೇಕಾದ ಕರ್ತರ್ವ್ಯಗಳು, ವಿಶೇಷ ಜವಾಬ್ದಾರಿಗಳು ಪಾಲಿಸಬೇಕು. ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಎಲ್ಲ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ಅಧಿಕಾರಿ ಬಿ.ಎಸ್. ರಾಘವೇಂದ್ರ ಅವರು, ಬಲ್ಕ್ ವೇಸ್ಟ್ ಜನರೇಟರ್‌ಗಳ ಜವಾಬ್ದಾರಿಗಳಲ್ಲಿ ಬರುವ ಪ್ರತಿದಿನ 100 ಕೆಜಿ ತ್ಯಾಜ್ಯ ಅಥವಾ 20 ಸಾವಿರ ಚ.ಮೀ ಕಟ್ಟಡ ಅಥವಾ 40 ಸಾವಿರ ಲೀಟರ್ ನೀರು ಬಳಕೆ ಮೇಲೆ ಬೃಹತ್ ತ್ಯಾಜ್ಯ ಉತ್ಪಾದಕರ ಜವಾಬ್ದಾರಿ, ಮೂಲದಲ್ಲಿಯೇ ಸಂಸ್ಕರಣೆ, ಆನ್‌ಲೈನ್ ನೋಂದಣಿ ಮತ್ತು ವರದಿ ಕಡ್ಡಾಯದ ಬಗ್ಗೆ ವಿವರಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಅನೀಲಕುಮಾರ ಚಳಗೇರಿ ಸೇರಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಗ್ರಾಮಮಟ್ಟದ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಸಿಬ್ಬಂದಿ ಇದ್ದರು.