ಬಾಗಲಕೋಟೆ ನಗರದಲ್ಲಿ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಕಾರ್ಯಕರ್ತರು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆಗ್ರಹಿಸಿದರು. 
ಬಾಗಲಕೋಟೆ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಅವಕಾಶಕ್ಕೆ ವಿರೋಧ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರದ ಕ್ರಮ ಖಂಡಿಸಿ ಶ್ರೀರಾಮಸೇನೆ ಕಾರ್ಯಕರ್ತರಿಂದ ಪ್ರತಿಭಟನೆ
  • ನ್ಯಾಯಾಲಯ ತೀರ್ಪು ಕಡೆಗಣಿಸಿದ ಸರ್ಕಾರ
ಬಾಗಲಕೋಟೆ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಗರದಲ್ಲಿ ಗುರುವಾರ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನವನಗರದ ಬಸ್ ನಿಲ್ದಾಣದಿಂದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಕೂಡಲೇ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಜಾಬ್ ಶಾಲಾ ಸಮವಸ್ತ್ರದ ಭಾಗವಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ, ಹೈಕೋರ್ಟ್ ಆದೇಶವನ್ನು ಕಡೆಗಣಿಸಿ, ಸಂವಿಧಾನ ವಿರೋಧಿ ನಿಲುವುಗಳನ್ನು ತೆಗೆದುಕೊಂಡಿರುವುದು ತುಷ್ಟೀಕರಣ ರಾಜಕಾರಣವಾಗಿದೆ ಎಂದು ಪ್ರತಿಭಟನಾ ಮುಖಂಡರು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರೀ ಒಂದು ಧರ್ಮದ ಪರವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾ ಬಂದಿದೆ. ಇದು ಕಾಂಗ್ರೆಸ್ ಪಕ್ಷದ ಅವನತಿಗೆ ನಾಂದಿ ಹಾಡಲಿದೆ ಎಂದರು.
ರಾಜ್ಯದಲ್ಲಿ ಯಾರೂ ಕೇಸರಿ ಶಾಲುಗಳನ್ನು ಹಾಕಿಕೊಂಡು ಶಾಲೆ, ಕಾಲೇಜುಗಳಿಗೆ ಯಾವ ವಿದ್ಯಾರ್ಥಿಗಳು ಹೋಗುತ್ತಿಲ್ಲ. ಇದು ನಾವು ಕಾನೂನು ಮತ್ತು ಸಂವಿಧಾನಕ್ಕೆ ನೀಡುವ ಗೌರವವಾಗಿದೆ. ಆದರೆ, ಇದೀಗ ಸರ್ಕಾರವೇ ಮುಂದೆ ನಿಂತು ಒಂದು ವರ್ಗದ ಜನರನ್ನು ತುಷ್ಟೀಕರಿಸಲು ಇದೀಗ ಹಿಜಾಬ್‌ಗೆ ಅವಕಾಶ ನೀಡಿದೆ. ಹೀಗಾಗಿ ಸರ್ಕಾರ ಕೂಡಲೇ ತನ್ನ ನಿರ್ಧಾರ ಬದಲಿಸಿ, ಕೂಡಲೇ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳು ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಶ್ರೀರಾಮಸೇನೆ ಸಂಘಟನೆ ರಾಜ್ಯ ಕಾರ್ಯದರ್ಶಿ ಶಹಾಜ ಪವಾರ ಎಚ್ಚರಿಸಿದರು.