ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ ಬಿಮಾ ಯೋಜನೆ ಅನುಷ್ಠಾನ ಕುರಿತು ಜರುಗಿದ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ಪ್ರಚಾರದ ಕರಪತ್ರಗಳನ್ನು ಬಿಡುಗಡೆ ಮಾಡಿದರು. ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ರಾಜಕುಮಾರ ಹೂಗಾರ ಮತ್ತಿತರರಿದ್ದರು.
- ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ
- ಗ್ರಾಪಂ ಮಟ್ಟದಲ್ಲಿ ಪ್ರಚಾರ ಬ್ಯಾನರ್ ಅಳವಡಿಕೆ
ಬಾಗಲಕೋಟೆ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆಯಡಿ ಅರ್ಹ ರೈತರ ನೋಂದಣಿಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ ಬಿಮಾ ಯೋಜನೆ ಅನುಷ್ಠಾನ ಕುರಿತು ಜರುಗಿದ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ರೈತರಿಗೆ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ನೋಂದಣಿಗೆ ಕ್ರಮವಹಿಸಬೇಕು ಎಂದರು.
ಹವಾಮಾನ ವೈಪರಿತ್ಯ, ಅತಿವೃಷ್ಟಿ, ಅನಾವೃಷ್ಟಿ, ಗಾಳಿ ಮಳೆ, ಪ್ರವಾಹ ಸೇರಿ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ದೊರೆಯಲು ಬೆಳೆ ಕಟಾವು ಪ್ರಯೋಗಗಳನ್ನು ಪಾರದರ್ಶಕವಾಗಿ ಮತ್ತು ನಿಗದಿತ ಅವಽಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಗೆ ಆಯ್ಕೆಯಾದ ಎಸ್‌ಬಿಐ ಜನರಲ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳು ಪ್ರತಿ ತಾಲೂಕು ಕಚೇರಿಗೆ ಸರಿಯಾಗಿ ಕೆಲಸ ಮಾಡುವ ಪ್ರತಿನಿಧಿಗಳನ್ನು ನಿಯೋಜನೆ ಮಾಡಬೇಕು. ಈ ಯೋಜನೆ ಸಾಲ ಪಡೆದ ರೈತರಿಗೆ ಕಡ್ಡಾಯವಾಗಿದ್ದು, ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದೆ ಎಂದು ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು, ಬೆಳೆವಾರು ವಿಮಾ ಕಂತು ಪಾವತಿ ಕುರಿತು ಮಾಹಿತಿ ನೀಡಿದರು. ಸೋಯಾ ಅವರೆ, ಜೋಳ (ನೀರಾವರಿ), ಉದ್ದು, ಹೆಸರು (ಮಳೆ ಆಶ್ರಿತ) ಬೆಳೆಗೆ ವಿಮಾ ಕಂತು ಪಾವತಿಗೆ ಜುಲೈ 15 ಕೊನೆಯ ದಿನವಾದರೆ, ಅರಿಶಿಣ, ಸೂರ್ಯಕಾಂತಿ, ಸಜ್ಜೆ, ಮುಸುಕಿನ ಜೋಳ, ಜೋಳ, ತೊಗರಿ, ಶೇಂಗಾ, ಎಳ್ಳು (ಮ.ಆ), ಕೆಂಪು ಮೆಣಸಿನಕಾಯಿ, ಮುಸುಕಿನ ಜೋಳ, ಸಜ್ಜೆ, ತೊಗರಿ, ಶೇಂಗಾ (ನೀರಾವರಿ) ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ, ಈರುಳ್ಳಿ (ನೀರಾವರಿ), ಈರುಳ್ಳಿ, ಕೆಂಪು ಮೆಣಸಿನಕಾಯಿ (ಮ.ಆ) ಬೆಳೆಗಳಿಗೆ ವಿಮೆ ಕಂತು ಪಾವತಿಗೆ ಆಗಸ್ಟ 14 ಆಗಿರುತ್ತದೆ ಎಂದು ತಿಳಿಸಿದರು.
ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳು, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಪಿಎಂ ಫಸಲ್ ಬಿಮಾ ಯೋಜನೆಯಡಿ ವಿವಿಧ ಬೆಳೆಗಳಿಗೆ ವಿಮಾ ಕಂತುಗಳನ್ನು ಪಾವತಿಸಿ ನೋಂದಾಯಿಸಿ ಕೊಳ್ಳಬಹುದಾಗಿದೆ. ಬೆಳೆ ವಿಮೆ ನೋಂದಣಿಗೆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡಿರಬೇಕು ಎಂದರು.
ಬೆಳೆ ಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಒಂದು ವೇಳೆ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸದೇ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರ ನೀಡಿದಲ್ಲಿ ಅಂತಹ ರೈತರನ್ನು ಈ ಯೋಜನೆಯಿಂದ ಕೈಬಿಡಲಾಗುತ್ತದೆ ಎಂದು ತಿಳಿಸಿದರು.
ಯೋಜನೆ ಪ್ರಚಾರದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ತೋವಿವಿಯ ವಿಸ್ತರಣಾ ನಿರ್ದೇಶಕ ಡಾ.ವಿರೇಶ ಹಿರೇಮಠ, ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗೌರಮ್ಮ ಸುಂಕದ, ಜಿಲ್ಲಾ ಅಗ್ರಣೀಯ ಬ್ಯಾಂಕ್‌ನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಬಾಗಲಕೋಟೆ ವಿಭಾಗದ ಕೃಷಿ ಉಪನಿರ್ದೇಶಕ ಕೆ.ಎಸ್.ಅಗಸನಾಳ, ಜಮಖಂಡಿ ವಿಭಾಗದ ಕೃಷಿ ಉಪ ನಿರ್ದೇಶಕಿ ಮಂಜುಳಾ ಬಸವರೆಡ್ಡಿ, ಬಿಡಿಸಿಸಿ ಬ್ಯಾಂಕ್‌ನ ಅಧಿಕಾರಿ ಜಿ.ಆರ್.ಕುಂದರಗಿ, ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಉಮೇಶ ಕಾಂತಿ ಸೇರಿ ಇತರರು ಉಪಸ್ಥಿತರಿದ್ದರು