ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಕುಂದುಕೊರತೆ ಸಭೆ ನಡೆಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಜಗದೀಶ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
- ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ
- ಜನಾಂಗದ ಕುಂದು ಕೊರತೆ ಸಭೆ
- ಕಚೇರಿಗೆ ಬರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ
ಬಾಗಲಕೋಟೆ: ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವಲ್ಲಿ ಇಲಾಖೆಗಳು ಸಮನ್ವಯದಿಂದ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮುದಾಯದ ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಗಳ ಸೌಲಭ್ಯಗಳಿಂದ ಯಾವುದೇ ಕಾರಣಕ್ಕೂ ವಂಚಿತರಾಗದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಯೋಜನೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಅಲೆಮಾರಿ ಹಾಗೂ ಅಲೆ ಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಆರೋಗ್ಯ ತಪಾಸಣೆ, ವಸತಿ ಹಾಗೂ ಜೀವನೋಪಾಯಕ್ಕೆ ಸಂಬಂಧಿಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಮುದಾಯದ ಜೀವನಮಟ್ಟ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಣ್ಣ ಪುಟ್ಟ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳ ಮೂಲಕ ಸಾಲ ವಿತರಣೆಗೆ ಮುಂದಾಗುವಂತೆ ಸಭೆಯಲ್ಲಿದ್ದ ಜಿಲ್ಲಾ ಅಗ್ರಣಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ ಹೂಗಾರ ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಕಜ ಮಾತನಾಡಿ, ಕಳೆದ 2025-26ನೇ ಸಾಲಿನಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ 1ರಿಂದ 8ನೇ ವಿದ್ಯಾರ್ಥಿಗಳಿಗೆ ಪ್ರತಿ ಪ್ರತಿ ತಿಂಗಳು 2 ಸಾವಿರ ರೂ. 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 4 ಸಾವಿರ ರೂ. ಗಳಂತೆ ಒಟ್ಟು 484 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಮೆಟ್ರಿಕ್ ನಂತರ ಪಿಯುಸಿ, ಡಿಪ್ಲೊಮಾ, ಪದವಿ, ಬಿಇ, ಎಂಬಿಬಿಎಸ್, ಬಿಡಿಎಸ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ಗಳಲ್ಲಿ ಅಭ್ಯಾಸಮಾಡುತ್ತಿರುವ 264 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ವಸತಿ ಯೋಜನೆಯಡಿ 63 ಮನೆಗಳ ಗುರಿ ಹೊಂದಲಾಗಿದ್ದು, ಇದರ ಜೊತೆಗೆ ಮೂಲ ಸೌಕರ್ಯ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸದಾಶಿವ ಬಡಿಗೇರ ಮಾತನಾಡಿ, ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನಸಂಖ್ಯೆ 35265 ಇದ್ದರೆ, ಪರಿಶಿಷ್ಟ ಪಂಗಡದ ಅಲೆಮಾರಿ ಜನಸಂಖ್ಯೆ ಒಟ್ಟು 4257 ಇದೆ. ಸದರಿ ಸಮುದಾಯಕ್ಕೆ ಅಲೆಮಾರಿ ಅಭಿವೃದ್ಧಿ ನಿಗಮದಡಿ 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಲೆಮಾರಿ ಜನಾಂಗಕ್ಕೆ ಸಾರಥಿ ಯೊಜನೆ, ನೇರ ಸಾಲ, ಉದ್ಯಮ ಶೀಲತಾ ಯೋಜನೆ, ಮೈಕ್ರೋ ಕ್ರೆಡಿಟ್, ಗಂಗಾ ಕಲ್ಯಾಣ, ಭೂ ಒಡೆತನ ಸೇರಿದಂತೆ ವಿವಿಧ ಯೋಜನೆಯಡಿ ಒಟ್ಟು 84 ಫಲಾನುಭವಿಗಳಿಗೆ ಸೌಲಭ್ಯ ನೀಡಿದರೆ, ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದ 12 ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ವಿವರಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಜಗದೀಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ ಡಿ. ಸೇರಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಪ್ರತಿನಿಧಿಗಳು ಇದ್ದರು.