ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಎಂ. ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಬಾಗಲಕೋಟೆ ತಹಸೀಲ್ದಾರ ವಾಸುದೇವ ಸ್ವಾಮಿ, ಹುನಗುಂದ ತಹಸೀಲ್ದಾರ ಡಾ. ಪ್ರದೀಪಕುಮಾರ ಇತರರು ಇದ್ದರು.
- ಡಿಸಿ ಸಂಗಪ್ಪ ಎಂ. ಸೂಚನೆ
- ವಿವಿಧ ರಾಜಕೀಯ ಪಕ್ಷಗಳ ಜೊತೆ ಸಭೆ
- ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ಮಾದರಿ ನೀತಿ ಸಂಹಿತೆಗಳನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಎಂ. ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಆಯೋಗವು ಜಾರಿಗೊಳಿಸಿದ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರೂ ಸಹಕರಿಸಬೇಕು ಎಂದರು.
ಚುನಾವಣಾ ವೇಳಾ ಪಟ್ಟಿಯಂತೆ ಮಾ. 16ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಮಾ.23 ಕೊನೆಯ ದಿನವಾಗಿದೆ. ಮಾ.24 ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮಾ.26 ಕೊನೆಯ ದಿನವಾಗಿದೆ. ಏ.9 ರಂದು ಮತದಾನ ನಡೆಯಲಿದ್ದು, ಮತ ಏಣಿಕೆ ಮೇ 4 ರಂದು ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.
ಎಂಸಿಸಿ ಜಿಲ್ಲಾ ನೋಡಲ್ ಅಧಿಕಾರಿ, ಜಿ.ಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ, ರ‌್ಯಾಲಿ, ವಾಹನಗಳಿಗೆ, ತಾತ್ಕಾಲಿಕ ಪಕ್ಷದ ಕಚೇರಿಗೆ, ಧ್ವನಿವರ್ಧಕಗಳಿಗೆ, ಹೆಲಿಪ್ಯಾಡ್ ಹಾಗೂ ಹೆಲಿಕಾಪ್ಟರ್ ಪರವಾನಗಿ ಕೋರಿ ಸುವಿಧಾ ಅಡಿ ಅರ್ಜಿ ಸಲ್ಲಿಸಿ, ಅನುಮತಿ ಪಡೆಯಬಹುದಾಗಿದೆ. ನೀತಿ ಸಂಹಿತೆಗೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗವು ಸಿವಿಜಿಲ್ ಮೊಬೈಲ್ ಆಪ್ ಮೂಲಕ ಯಾವುದೇ ವ್ಯಕ್ತಿಯು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳನ್ನು ಸಲ್ಲಿಸಲು ಅವಕಾಶವಿದೆ. ಸದರಿ ಆಪ್ ಮೂಲಕ ಬಂದ ದೂರುಗಳ ಬಗ್ಗೆ ಮಾದರಿ ನೀತಿ ಸಂಹಿತೆ ತಂಡಕ್ಕೆ ಆನ್‌ಲೈನ್ ಮುಖಾಂತರ ತಿಳಿಸುವದರ ಜೊತೆಗೆ ನಿಗದಿಪಡಿಸಿದ ಸಮಯದೊಳಗೆ ಕ್ರಮ ಜರುಗಿಸಲಾಗುತ್ತದೆ. ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಬಾಗಲಕೋಟೆ ತಹಸೀಲ್ದಾರ ವಾಸುದೇವ ಸ್ವಾಮಿ, ಹುನಗುಂದ ತಹಸೀಲ್ದಾರ ಡಾ.ಪ್ರದೀಪಕುಮಾರ ಸೇರಿದಂತೆ ಇತರರು ಇದ್ದರು.