ಮುಂಡಗೋಡ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಪಾಲಕರು ತಾಲೂಕಾಸ್ಪತ್ರೆಗೆ ದಾಖಲಿಸಿರುವುದು.
ಮುಂಡಗೋಡ: ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಎಂದಿನಂತೆ ಮಧ್ಯಾಹ್ನ ಎಲ್ಲ ವಿದ್ಯಾರ್ಥಿಗಳು ಊಟ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳು ಹೊಟ್ಟೆ ನೋವು ಹಾಗೂ ವಾಂತಿ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಶಾಲೆಗೆ ಬಂದ ಪಾಲಕರೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪ
ಬಿಸಿಯೂಟದಲ್ಲಿ ಇಲಿಯ ಹಿಕ್ಕಿಗಳು ಕಂಡು ಬಂದಿವೆ. ಇವುಗಳಿಂದಲೇ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಕಾರಣವೆಂದು ಪಾಲಕರು ಆರೋಪಿಸಿದ್ದಾರೆ. ಅಲ್ಲದೆ, ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಇಲ್ಲ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ಇದರಿಂದ ಪಾಲಕರು ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ, ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥಗೊಂಡರೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಸ್ಪತ್ರೆಗೆ ದಾಖಲಿಸಲು ಮುಂದಾಗದಿರುವುದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಶಾಸಕ ಹೆಬ್ಬಾರ ಭೇಟಿ
ವಿಷಯ ತಿಳಿಯುತ್ತಿದ್ದಂತೆ ಶಾಸಕ ಶಿವರಾಮ ಹೆಬ್ಬಾರ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನಂತರ ತಾಪಂ ಇಒ ಟಿ.ವೈ.ದಾಸನಕೊಪ್ಪ, ಪಪಂ ಮುಖ್ಯಾಧಿಕಾರಿ ಸಂತೋಷಕುಮಾರ, ಸಿಪಿಐ ರಂಗನಾಥ ನೀಲಮ್ಮನವರ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯದ ಕುರಿತು ಮಾಹಿತಿ ಪಡೆದರು.