ಮುಧೋಳ ತಾಲೂಕು ಆಸ್ಪತ್ರೆಯಿಂದ ಬಿಡುಗಡೆಯಾದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಆರ್. ಛಬ್ಬಿ, ಸಿಆರ್‌ಪಿ ಬಸವರಾಜ ಬಳ್ಳಾರಿ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
- ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದ 20ವಿದ್ಯಾರ್ಥಿಗಳು ಗುಣಮುಖ
- ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ.
- ಎಲ್‌ಕೆಜಿ ಹಾಗೂ ಯುಕೆಜಿ ತರಗತಿಯ ಮಕ್ಕಳಿಗೆ ವಾಂತಿ ಹಾಗೂ ಅಸ್ವಸ್ಥತೆ
ಮುಧೋಳ: ತಾಲೂಕಿನ ಮುಗಳಖೋಡ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ 20 ವಿದ್ಯಾರ್ಥಿಗಳು ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಮುಧೋಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18 ವಿದ್ಯಾರ್ಥಿಗಳನ್ನು ಬುಧವಾರ ಹಾಗೂ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳೂ ಗುಣಮುಖರಾಗಿ ಇಂದು ಮನೆಗೆ ತೆರಳಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿಯನ್ನು ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಯ ಮಕ್ಕಳಿಗೆ ವಾಂತಿ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಮುಧೋಳ ತಾಲೂಕು ಆಸ್ಪತ್ರೆ ಹಾಗೂ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ವಸಂತ ಮುದಿಗೌಡ ಮಾತನಾಡಿ, ಎಲ್ಲ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಂ. ಮುಲ್ಲಾ, ಪಾಲಕರಿಗೆ ಧೈರ್ಯ ತುಂಬಿ ಮಕ್ಕಳ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಶಾಲೆಗಳ ಬಿಸಿಯೂಟದ ಗುಣಮಟ್ಟ ಹಾಗೂ ಆಹಾರ ಸುರಕ್ಷತೆ ಕುರಿತು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಶಧಿಕಾರಿ ಎ.ಆರ್. ಛಬ್ಬಿ, ಸಿಆರ್‌ಪಿ ಬಸವರಾಜ ಬಳ್ಳಾರಿ ಸೇರಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
"
ಮುಗಳಖೋಡ ಶಾಲೆಯ ಬಿಸಿಯೂಟ ಪ್ರಕರಣದಲ್ಲಿ ಅಸ್ವಸ್ಥಗೊಂಡ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಈಗ ಸ್ಥಿರವಾಗಿದೆ. ಬಹುತೇಕ ಮಕ್ಕಳು ಗುಣಮುಖರಾಗಿ ಮನೆಗೆ ಮರಳಿದ್ದು, ಇನ್ನೋರ್ವ ವಿದ್ಯಾರ್ಥಿ ಶುಕ್ರವಾರ ಬೆಳಗ್ಗೆ ಬಿಡುಗಡೆಯಾಗಲಿದ್ದಾನೆ. ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ.
- ಎಸ್.ಎಂ. ಮುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ, ಮುಧೋಳ