ಬಾದಾಮಿ ಪಟ್ಟಣದಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಎಂ.ಎಂ. ಬೂದಿಹಾಳ, ಘಟಕ ವ್ಯವಸ್ಥಾಪಕ ಅಶೋಕ ಕೋರಿ ಇದ್ದರು. 
ಬಾಗಲಕೋಟೆ

ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿಕೆ
  • ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ
  • ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಬೇಕು
ಬಾದಾಮಿ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರಕ್ಕೆ ಬಂದು ಶಾಲೆ ಕಲಿಯಲು ಅನುಕೂಲವಾಗುವಂತೆ ಬಸ್ ಪಾಸ್ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ವಿತರಣಾ ಸಮಾರಂಭ'ದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಬೇಕು ಎಂಬ ಆಶಯದೊಂದಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲಾಗುತ್ತಿದ್ದು, ಈ ಯೋಜನೆಯು ವಿಶೇಷವಾಗಿ ಗ್ರಾಮೀಣ ಪ್ರದೇಶದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ದೊಡ್ಡ ನೆರವಾಗಲಿದೆ ಎಂದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವುದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ನಿರ್ಧಾರವಾಗಿದೆ ಎಂದು ಹೇಳಿದರು.
ಉಚಿತ ಬಸ್ ಪಾಸ್‌ನಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಪ್ರತಿದಿನ ಯಾವುದೇ ಆರ್ಥಿಕ ಹೊರೆಯಿಲ್ಲದೆ ಶಾಲೆ ಹಾಗೂ ಕಾಲೇಜುಗಳಿಗೆ ಪ್ರಯಾಣಿಸಬಹುದಾಗಿದೆ. ಇದರಿಂದ ಶಿಕ್ಷಣದಿಂದ ಯಾರೂ ವಂಚಿತರಾಗದೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಶಿಕ್ಷಣ ಪಡೆದು ವೈದ್ಯರು, ಇಂಜಿನಿಯರ್‌ಗಳು, ಐಎಎಸ್, ಐಪಿಎಸ್ ಅಧಿಕಾರಿಗಳು, ವಿಜ್ಞಾನಿಗಳು, ಶಿಕ್ಷಕರು ಹಾಗೂ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ತಮ್ಮ ಕುಟುಂಬ, ಊರು, ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವುಕುಮಾರ ಹಿರೇಮಠ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಎಂ.ಎಂ. ಬೂದಿಹಾಳ, ಘಟಕ ವ್ಯವಸ್ಥಾಪಕ ಅಶೋಕ ಕೋರಿ ಇದ್ದರು.