ಜಮಖಂಡಿ ನಗರದ ಗ್ರಾಮೀಣ ಪೊಲೀಸ್ ಠಾಣಾ ಆವರಣದಲ್ಲಿ ನಡೆದ ಸಭೆಯಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ ಅವರಿಗೆ ಎಸ್‌ಪಿ ಸಿದ್ಧಾರ್ಥ ಗೋಯಲ್ ಪ್ರಶಂಸಾ ಪತ್ರ ನೀಡಿ ಅಭಿನಂದಿಸಿದರು.
- ಎಸ್ಪಿ ಸಿದ್ಧಾರ್ಥ ಗೋಯಲ್ ಹೇಳಿಕೆ
- ಸಿಬ್ಬಂದಿಗೆ ಪ್ರಶಂಸಾ ಪತ್ರ ವಿತರಣೆ
- ಹಿಪ್ಪರಗಿ ಗ್ರಾಮದಲ್ಲಿ ಜು.25ರಂದು ರಾತ್ರಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ.
ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜಿಲೆಟಿನ್ ಬಾಂಬ್ ಬಳಸಿ ಕಾರು ಸ್ಫೋಟಿಸಿ ಕೊಲೆ ಮಾಡಲು ಯತ್ನಿಸಿದ ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾದ ಸ್ಥಳೀಯ ಪೊಲೀಸ್ ಸಿಬ್ಬಂದಿ ಸಾಹಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಶ್ಲಾಘಿಸಿ, ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿದ್ದಾರೆ.
ನಗರದ ಗ್ರಾಮೀಣ ಪೊಲೀಸ್ ಠಾಣಾ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ, ಸಿಪಿಐ ಮಲ್ಲಪ್ಪ ಮಡ್ಡಿ ನೇತೃತ್ವದ ಪಿಎಸ್‌ಐ, ಎಎಸ್‌ಐ ಹಾಗೂ ಕಾನ್‌ಸ್ಟೆಬಲ್ ಸಿಬ್ಬಂದಿಗೆ ಎಸ್ಪಿ ಪ್ರಶಂಸಾ ಪತ್ರಗಳನ್ನು ವಿತರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಸಿದ್ಧಾರ್ಥ ಗೋಯಲ್, ಹಿಪ್ಪರಗಿ ಗ್ರಾಮದಲ್ಲಿ ಜು.25ರಂದು ರಾತ್ರಿ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಹಣಕಾಸಿನ ವ್ಯವಹಾರ ಹಾಗೂ ಭೂಮಿ ವಿವಾದದ ಹಿನ್ನೆಲೆಯಲ್ಲಿ ಬಾರ್ ಮಾಲೀಕ ಹಣಮಂತ ಅಥಣಿ ಅವರಿಗೆ ಬೆದರಿಕೆ ಹಾಕಿ ಕೊಲೆ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸ್ಫೋಟಕ ಇರಿಸಿ ಸ್ಫೋಟಿಸಲಾಗಿತ್ತು ಎಂದು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾನಂದ ಜಲ್ಲಿ, ರೇವಣಪ್ಪ ಜಲ್ಲಿ, ಮಹದೇವ ಸಂಗಾಪುರ ಹಾಗೂ ಮಲ್ಲಿಕಾರ್ಜುನ ಭದ್ರಪನವರ ಎಂಬುವವರನ್ನು ಬಂಧಿಸಲಾಗಿದೆ. ಸ್ಫೋಟಕ ವಸ್ತುಗಳನ್ನು ಪೂರೈಸಿದ ಆರೋಪ ಹೊತ್ತಿರುವ ಗಜಾನನ ಸಂಗಾಪುರ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಕರಣದ ಯಶಸ್ವಿ ತನಿಖೆಗಾಗಿ ಎಎಸ್‌ಪಿ ಜಗದೀಶ, ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ ಹಾಗೂ ಸಿಪಿಐ ಮಲ್ಲಪ್ಪ ಮಡ್ಡಿ ಅವರ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿವೆ.
ತಲೆಮರೆಸಿಕೊಂಡಿರುವವರು ಹಾಗೂ ಆರೋಪಿಗಳಿಗೆ ಸಹಕಾರ ನೀಡಿದವರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದರು.
ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.