ಅಮೀನಗಡ ಪಟ್ಟಣದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಕಾರ್ಯಕರ್ತರು ಸನ್ಮಾನ ಮಾಡಿ, ಗೌರವಿಸಿದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಚರಂತಿಮಠ, ಶಾಸಕರಾದ ಎನ್.ಎಚ್. ಕೋನರಡ್ಡಿ, ಭೀಮಸೇನ ಚಿಮ್ಮನಕಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಇತರರಿದ್ದರು.
- ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿಕೆ
- ಸಂಘಟಿತವಾಗಿ ಕೆಲಸ ಮಾಡಲು ಕರೆ
- ಕಾಂಗ್ರೆಸ್ ಕಾರ್ಯಕರ್ತರ ಸಭೆ
ಅಮೀನಗಡ : ಬಿಜೆಪಿಯ ಸುಳ್ಳು ಭರವಸೆಗಳನ್ನು ಮತದಾರರು ನಂಬಬಾರದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗೊಂಡಿರುವ ಅಭಿವದ್ಧಿ ಕಾರ್ಯಗಳು ಹಾಗೂ ಹಿರಿಯ ನಾಯಕ ಎಚ್.ವೈ. ಮೇಟಿ ಅವರ ಸಾಧನೆಗಳನ್ನು ಜನರಿಗೆ ತಿಳಿಸಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರಿಗೆ ಹೆಚ್ಚಿನ ಮತಗಳಿಂದ ಗೆಲುವು ತಂದುಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಚುನಾವಣೆ ಎದುರಿಸಲು ಕಾರ್ಯಕರ್ತರು ಪ್ರತಿಯೊಂದು ವಾರ್ಡ್‌ನಲ್ಲೂ ಸಂಘಟಿತವಾಗಿ ಕೆಲಸ ಮಾಡಬೇಕೆಂದು ತಿಳಿಸಿದರು. ಶೀಘ್ರದಲ್ಲೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಹಲವು ಸಚಿವರು ಕ್ಷೇತ್ರಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಚರಂತಿಮಠ ಮಾತನಾಡಿ, ಬಿಜೆಪಿ ವಿರುದ್ಧ ಟೀಕೆ ಮಾಡುವ ಅಗತ್ಯ ಕಾಂಗ್ರೆಸ್‌ಗೆ ಇಲ್ಲ. ಅವರದೇ ಪಕ್ಷದ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತತ್ವದ ಸರ್ಕಾರದ ಅಭಿವದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಹೆಚ್ಚಿಸಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಅಭ್ಯರ್ಥಿ ಉಮೇಶ ಮೇಟಿ, ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಸೇರಿ ಹಲವು ಮುಖಂಡರು ಮಾತನಾಡಿದರು.
ಶಾಸಕರಾದ ಎನ್.ಎಚ್. ಕೋನರಡ್ಡಿ, ಭೀಮಸೇನ ಚಿಮ್ಮನಕಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ ಸೇರಿ ಇನ್ನಿತರರು ಇದ್ದರು.