ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಯುವ ಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಗದ್ದಿ, ಪಿಎಸ್‌ಐ ಗಂಗೂ ಬಿರಾದಾರ ಇತರರಿದ್ದರು. 
ಬಾಗಲಕೋಟೆ

ಮಾದಕ ವ್ಯಸನಕ್ಕೆ ಬಲಿಯಾಗದಿರಿ

ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಸಲಹೆ

ಬಾಗಲಕೋಟೆ: ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆಯ ವ್ಯಸನಕ್ಕೆ ವಿಶೇಷವಾಗಿ ಯುವ ಜನರು ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಯುವ ಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.

ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ಕೇವಲ ಕಾನೂನು ಕ್ರಮಗಳಷ್ಟೇ ಸಾಕಾಗುವುದಿಲ್ಲ. ಕುಟುಂಬ, ಶಿಕ್ಷಣ ಸಂಸ್ಥೆಗಳು, ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಯುವ ಜನರು ಕ್ರೀಡೆ, ವ್ಯಾಯಾಮ ಹಾಗೂ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಗದ್ದಿ, ಪಿಎಸ್‌ಐ ಗಂಗೂ ಬಿರಾದಾರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಸೇರಿ ಇತರರು ಉಪಸ್ಥಿತರಿದ್ದರು.

ಜಾಥಾವು ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು ಜಿಲ್ಲಾ ನ್ಯಾಯಾಲಯದ ಮಾರ್ಗವಾಗಿ ನವನಗರ ಬಸ್ ನಿಲ್ದಾಣ, ಜಿಲ್ಲಾಡಳಿತ ಭವನ, ಎಲ್‌ಐಸಿ ಸರ್ಕಲ್ ಮೂಲಕ ಸಂಚರಿಸಿ ಮರಳಿ ಜಿಲ್ಲಾ ಕ್ರೀಡಾಂಗಣಕ್ಕೆ ಮುಕ್ತಾಯಗೊಂಡಿತು.

ಜಾಥಾದಲ್ಲಿ ಅಧಿಕಾರಿಗಳು, ಕ್ರೀಡಾಪಟುಗಳು, ವಿದ್ಯಾರ್ಥಿಗಳು, ಭಾಗವಹಿಸಿ ಮಾದಕ ವಸ್ತುಗಳ ವಿರುದ್ಧ ಜಾಗತಿ ಮೂಡಿಸಿದರು. ಜಾಥಾಕ್ಕೂ ಮುನ್ನ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಲಾಯಿತು.