ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಜಿಲ್ಲೆಯಲ್ಲಿ 35 ರಿಂದ 40 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಮನೆ ನಿರ್ಮಿಸಿಕೊಂಡ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.
ಫಲಾನುಭವಿಗಳಿಗೆ ಸಾಗುವಳಿ ಚೀಟಿ, ಹಕ್ಕುಪತ್ರಗಳ ವಿತರಣೆ, ಸ್ಮಶಾನ ಭೂಮಿ ಮಂಜೂರು ಸೇರಿ ಬಡವರ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ತಾಲೂಕಿನ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಬಹುಜನ ಸಮಾಜ ಪಾರ್ಟಿ ಪ್ರತಿಭಟನೆಯಲ್ಲಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅಸ್ಪೃಶ್ಯತೆ, ನಿರುದ್ಯೋಗ, ಬಡತನ ನಿರ್ಮೂಲನೆ ಆಗಿಲ್ಲ. ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿಲ್ಲ. ಜಿಲ್ಲೆಯಲ್ಲಿನ ಎಸ್‌ಸಿ, ಎಸ್‌ಟಿ, ಹಿಂದುಳಿದವರು, ಧಾರ್ಮಿಕ ಅಲ್ಪಾಸಂಖ್ಯಾತರ ಸಮಸ್ಯಗೆ ಪರಿಹಾರ ಕಲ್ಪಿಸಿಲ್ಲ ಎಂದು ದೂರಿದರು.
ಜಿಲ್ಲೆಯಲ್ಲಿ ಬಡ ಕುಟುಂಬಗಳಿಗೆ ಶೇ.50 ಸ್ಮಶಾನಗಳ ಕೊರತೆಯಿದ್ದು, ಸ್ಮಶಾನ ಮಂಜೂರು ಮಾಡಬೇಕು. ಸರ್ವೇ, ಪೋಡಿ ಸಮಸ್ಯೆ ಬಗೆಹರಿಸಬೇಕು. ಪಿಟಿಸಿಎಲ್ ಕಾಯ್ದೆ ಅನ್ವಯ ಪರಭಾರೆಯಾಗಿರುವ ಜಮೀನುಗಳ ಪ್ರಕರಣಗಳನ್ನು 6 ತಿಂಗಳೊಳಗೆ ಇತ್ಯರ್ಥಪಡಿಸಬೇಕು. ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ಪರಿಹಾರ ಹಾಗೂ ಸರ್ಕಾರದ ಸೌಲಭ್ಯ ಒದಗಿಸಬೇಕು. ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕು. ನಿರುದ್ಯೋಗಿಗಳಿಗೆ ಮಾಸಿಕ 5 ಸಾವಿರ ರೂ. ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಅರಳೂರು ನರಸಿಂಹಯ್ಯ, ಚಿಕ್ಕ ರಂಗಣ್ಣ, ದೇವಪ್ಪ, ಪ್ರಧಾನ ಕಾರ್ಯದರ್ಶಿ ಗೋಪಾಲ್, ತಾಲೂಕು ಅಧ್ಯಕ್ಷ ಪಿಳ್ಳಪ್ಪ, ನೆಲಮಂಗಲ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಹೊಸಕೋಟೆ ತಾಲೂಕು ಅಧ್ಯಕ್ಷ ಲಕ್ಷ್ಮೀನಾರಾಯಣ್, ದೇವನಹಳ್ಳಿ ಅಧ್ಯಕ್ಷ ನಾಗರಾಜ ಇದ್ದರು.