ಮೈಸೂರು: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಸೋಮವಾರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಜಿಲ್ಲೆಯ ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಈದ್ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಒಂದೆಡೆ ಸೇರಿ ಹಬ್ಬದ ಶುಭಾಶಯ ವಿನಿಯಮ ಮಾಡಿಕೊಂಡರು. ಮನೆಗಳಲ್ಲೂ ಹಬ್ಬ ಆಚರಿಸಿದರು. ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ನಡೆಯಿತು. ಹೊಸ ಬಟ್ಟೆಗಳನ್ನು ತೊಟ್ಟು ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ ಹಾಗೂ ಪ್ರವಚನ ನಡೆಯಿತು.
ಸಾಮೂಹಿಕ ಪ್ರಾರ್ಥನೆ: ನಗರದ ತಿಲಕ್‌ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಧಾರ್ಮಿಕ ಗುರು ಹಜರತ್ ಮೌಲಾನಾ ಮಹಮ್ಮದ್ ಉಸ್ಮಾನ್ ಷರೀಫ್ ಅವರ ನೇತೃತ್ವದಲ್ಲಿ ಸಾವಿರಾರು ಜನ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶುಭಾಶಯ ವಿನಿಮಯ ಮಾಡಿಕೊಂಡರು. ಉದಯಗಿರಿ, ಕಲ್ಯಾಣಗಿರಿ, ರಾಜೀವ್‌ನಗರ, ಗೌಸಿಯಾನಗರ, ಮಂಡಿ ಮೊಹಲ್ಲಾ, ದೇವರಾಜ ಮೊಹಲ್ಲಾ, ಉಸ್ಮಾನಿಯಾ ಬ್ಲಾಕ್, ಎನ್.ಆರ್.ಮೊಹಲ್ಲಾ, ಕೆಸರೆ, ಹಳೇ ಕೆಸರೆ ಸೇರಿದಂತೆ ವಿವಿಧ ಬಡಾವಣೆಗಳ ಮುಸಲ್ಮಾನರು ಈದ್ಗಾ ಮೈದಾನದಲ್ಲಿ ಸಮಾವೇಶಗೊಂಡು ಸರ್‌ಖಾಜಿ ಅವರು ವಿಶೇಷ ಸಂದೇಶ ನೀಡುತ್ತಿದ್ದಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.