ಬಳ್ಳಾರಿಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ., ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಉಪ ಆಯುಕ್ತ ನಂದೀಶ್ ಇದ್ದರು. 
ಬಳ್ಳಾರಿ

ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಆಯೋಗವು ವಿಧಿ-ವಿಧಾನಗಳನ್ನು ರೂಪಿಸಿದೆ
  • ಮನೆ-ಮನೆ ಸಮೀಕ್ಷೆ ಮತ್ತು ಗಣತಿ ಪ್ರಕ್ರಿಯೆ
ಬಳ್ಳಾರಿ : ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್.ಕೆ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಅಂಗವಾಗಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳಿಗೆ ಮಂಗಳವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸಲು ಚುನಾವಣಾ ಆಯೋಗವು ವಿಧಿ-ವಿಧಾನಗಳನ್ನು ರೂಪಿಸಿದೆ. ಮನೆ-ಮನೆ ಸಮೀಕ್ಷೆ ಮತ್ತು ಗಣತಿ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ನೇಮಿಸಿರುವ ಬೂತ್ ಮಟ್ಟದ ಏಜೆಂಟರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಮತದಾರರಿಗೆ ಗಣತಿ ನಮೂನೆಯನ್ನು ನೀಡಲಾಗುತ್ತದೆ. ಇದರಲ್ಲಿ ಎರಡು ಪ್ರತಿಗಳಿರುತ್ತವೆ ಒಂದನ್ನು ಮತದಾರರು ತಮ್ಮ ಬಳಿ ಇಟ್ಟುಕೊಳ್ಳಬೇಕು, ಮತ್ತೊಂದನ್ನು ಅಧಿಕಾರಿಗಳಿಗೆ ನೀಡಬೇಕು ಎಂದರು.
ಮತದಾನ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸುಲಭಗೊಳಿಸಲು ತರಲಾಗಿರುವ ಎಸ್‌ಐಆರ್ ತಂತ್ರಾಂಶ ವ್ಯವಸ್ಥೆಯ ಕುರಿತು ಸವಿಸ್ತಾರವಾದ ಮಾಹಿತಿ ಹೊಂದಬೇಕು. ಈ ವ್ಯವಸ್ಥೆಯನ್ನು ಕ್ಷೇತ್ರ ಮಟ್ಟದಲ್ಲಿ ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಮತ್ತು ತಾಂತ್ರಿಕ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಅಧಿಕಾರಿಗಳು ಮನವರಿಕೆ ಮಾಡಿಕೊಳ್ಳಬೇಕು ಎಂದರು. ತರಬೇತಿ ನಡೆಯುತ್ತಿದ್ದ ಎಲ್ಲ ಕೊಠಡಿಗಳಿಗೆ ಭೇಟಿ ನೀಡಿದ ಡಿಸಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿದರು.
ಮತಗಟ್ಟೆ ಅಧಿಕಾರಿಗಳ ಕರ್ತವ್ಯಗಳು, ತಪ್ಪುಗಳಿಲ್ಲದ ಮತದಾರರ ಪಟ್ಟಿ ಸಿದ್ಧಪಡಿಸುವುದು ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವುದು ಸೇರಿದಂತೆ ಪರಿಷ್ಕರಣಾ ಪ್ರಕ್ರಿಯೆಯ ವಿವಿಧ ಹಂತಗಳ ಬಗ್ಗೆ ತರಬೇತಿಯಲ್ಲಿ ಸಂಪೂರ್ಣವಾಗಿ ವಿವರಿಸಲಾಯಿತು.
==