ಬಳ್ಳಾರಿಯ ಕನ್ನಡ ಭವನದಲ್ಲಿ ಆಯೋಜಿಸಿದ್ದ ಮನೆಗೊಂದು ಗ್ರಂಥಾಲಯ ಹಾಗೂ ಜಿಲ್ಲಾ ಜಾಗೃತ ಸಮಿತಿ ರಚನಾ ಸಮಿತಿ ಸಭೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಉದ್ಘಾಟಿಸಿದರು. ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಾಹಿತಿಗಳಾದ ಅಬ್ದುಲ್ ಹೈ., ಡಾ.ಬಸವರಾಜ ಗದಗಿನ, ವೀರೇಂದ್ರ ರಾವಿಹಾಳ್, ದಸ್ತಗಿರಿ ಸಾಬ್ ದಿನ್ನಿ, ತಿಪ್ಪೇರುದ್ರ, ಮಂಜುನಾಥ ಇದ್ದರು.
ಬಳ್ಳಾರಿ : ಸಾಹಿತ್ಯ ಪ್ರಿಯರ ಹಾಗೂ ಸಾಹಿತ್ಯಕ್ಕೆ ಕೊರತೆಯಿಲ್ಲ. ಪುಸ್ತಕಗಳು ಮನೆಮನೆಗೆ ತಲುಪಿ ಅವು ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು.
ನಗರದ ಕನ್ನಡ ಭವನದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಹಾಗೂ ಜಿಲ್ಲಾ ಜಾಗೃತ ಸಮಿತಿ ರಚನಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಅಂತರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರ ಹಾರ್ಟಲ್ಯಾಂಪ್ ಕೃತಿ ಕೋಟಿ ರೂ. ವಹಿವಾಟು ನಡೆದಿದೆ, ಎಂದರೆ ಪುಸ್ತಕಗಳಿಗೆ ಎಷ್ಟು ಬೇಡಿಕೆಯಿದೆ ಎಂಬುದು ಅರಿಯಬೇಕು. ಕನ್ನಡ ಪುಸ್ತಕ ಪ್ರಾಧಿಕಾರವು ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿದೆ ಎಂದರು.
ಕಸಾಪ ಜಿಲ್ಲಾದ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿ, ಮನೆಮನೆಗೆ ಪುಸ್ತಕ ತಲುಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ಎರಡು ದಿನಗಳ ಪುಸ್ತಕ ಮೇಳ ಆಯೋಜಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತ ಸಮಿತಿ ರಚಿಸಿ, ಹತ್ತು ಜನರಿಗೆ ಅರ್ಹತಾ ಪತ್ರ ವಿತರಿಸಲಾಯಿತು.