- ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ಧ
- ನೇಮಕಾತಿ ಪ್ರಕ್ರಿಯೆ ನಡೆಸಬೇಕು
ಬಳ್ಳಾರಿ : ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ (ರಾಬಕೊವಿ)ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ಯೋಗ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕರ್ನಾಟಕ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ಎಲ್.ಮಾರೆಣ್ಣ ಹೇಳಿದರು.
ನಗರದ ಪತ್ರಿಕಾಭವನದಲ್ಲಿಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಒಕ್ಕೂಟದ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸದೇ ಮುಂದುವರಿಸಿರುವುದು ಸರ್ಕಾರದ ಆದೇಶ ಹಾಗೂ ಸಾಮಾಜಿಕ ನ್ಯಾಯದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ, ಒಳಮೀಸಲಾತಿ ಕಡ್ಡಾಯವಾಗಿ ಅಳವಡಿಸಿದ ನಂತರವೇ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದರು.
ಕಳೆದ ಜೂ.30ರಂದು ನಡೆದ 353ನೇ ಆಡಳಿತ ಮಂಡಳಿ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ತೀರ್ಮಾನ ಕೈಗೊಳ್ಳಲಾಗಿದ್ದು, ಬಳಿಕ ಜುಲೈ 20ರಂದು ನಡೆದ ನೇಮಕಾತಿ ಉಪಸಮಿತಿ ಸಭೆಯಲ್ಲಿ 1:5 ಅನುಪಾತದಲ್ಲಿ ನೇಮಕಾತಿ ಆದೇಶ ಹೊರಡಿಸುವ ಕುರಿತು ನಿರ್ಧಾರ ಮಾಡಲಾಗಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪರಿಗಣಿಸದಿರುವುದು ಮಾದಿಗ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಈಗಾಗಲೇ ನಡೆದಿರುವ ನೇಮಕಾತಿ ಆದೇಶ ಹಾಗೂ ಸಂಬಂಧಿತ ಪ್ರಕ್ರಿಯೆ ರದ್ದುಗೊಳಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಪದಾಧಿಕಾರಿಗಳಾದ ದುರುಗಪ್ಪ ತಾಳವಾರ, ಸಿದ್ದೇಶ್, ಗಂಗಾಧರ್, ಹುಲುಗಪ್ಪ, ಶ್ರೀನಿವಾಸ ಬಂಡಾರಿ, ಗೋವರ್ಧನ್ ಇದ್ದರು.